ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿ ಮಾಡಿರುವ ಲಾಕ್ ಡೌನ್ ವಿಸ್ತರಣೆ ಗೊಂದಲ ಮುಂದುವರಿದಿದೆ. ಈ ನಡುವೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಇನ್ನೂ 7 ದಿನಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡುವಂತೆ ಸಲಹೆ ನೀಡಿದೆ.
ರಾಜ್ಯದಲ್ಲಿ ಪ್ರಸ್ತುತ ಇರುವ ಲಾಕ್ ಡೌನ್ ಅವಧಿ ಜೂನ್ 7ಕ್ಕೆ ಅಂತ್ಯವಾಗಲಿದೆ. ಲಾಕ್ ಡೌನ್ ನಿಂದಾಗಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಇಳಿಕೆಯಾಗಿದೆ. ಆದರೆ ಗ್ರಾಮೀಣ ಭಾಗಗಳಲ್ಲಿ ಸೋಂಕು ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ತಕ್ಷಣ ಅನ್ ಲಾಕ್ ಪ್ರಕ್ರಿಯೆ ಆರಂಭಿಸಿದರೆ ಕೊರೊನಾ ಸೋಂಕು ಮತ್ತೆ ಹೆಚ್ಚಳವಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಮತ್ತೆ 7 ದಿನಗಳಾದರೂ ಲಾಕ್ ಡೌನ್ ವಿಸ್ತರಿಸುವಂತೆ ತಾಂತ್ರಿಕ ಸಲಹಾ ಸಮಿತಿ ಹಾಗೂ 31 ಜಿಲ್ಲಾಧಿಕಾರಿಗಳೂ ಕೂಡ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಜಿಲ್ಲೆಗಳ ವರದಿ ಆಧರಿಸಿ ಕೋವಿಡ್ ಟಾಸ್ಕ್ ಫೋರ್ಸ್ ಅಧಿಕಾರಿಗಳು ಕೂಡ ಲಾಕ್ ಡೌನ್ ವಿಸ್ತರಣೆಗೆ ಸೂಚಿಸಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಜೂನ್ 14ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡುವ ಸಾಧ್ಯತೆ ಇದ್ದು, ಈ ಬಗ್ಗೆ ಸಿಎಂ ಯಡಿಯೂರಪ್ಪ ಅಂತಿಮವಾಗಿ ನಿರ್ಧಾರ ಕೈಗೊಳ್ಳಲಿದ್ದಾರೆ.