ಬೆಂಗಳೂರು: ಈ ಬಾರಿ ಬಿಜೆಪಿ 130-135 ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅನೇಕ ರೋಡ್ ಶೋ ಮಾಡಿದ್ದಾರೆ. ಈ ಬಾರಿ ಬಿಜೆಪಿ ಸ್ವಂತ ಬಲದಿಂದ ಸರ್ಕಾರ ರಚನೆ ಮಾಡಲಿದೆ. ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳ ಮಾಡಿ ಇತಿಹಾಸ ಸೃಷ್ಟಿಸಿದ್ದೇವೆ ಎಂದರು.
ಕಾಂಗ್ರೆಸ್ ನವರು ವೀರಶೈವ ಲಿಂಗಾಯಿತ ಸಮಾಜವನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ವೀರಶೈವ ಲಿಂಗಾಯಿತರನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಆದರೆ ಅದು ಎಂದಿಗೂ ಸಾಧ್ಯವಿಲ್ಲ. ವೀರಶೈವ ಲಿಂಗಾಯಿತ ಸಮಾಜ ಎಂದಿಗೂ ನಮ್ಮ ಜೊತೆ ಇದೆ ಎಂದು ಹೇಳಿದರು.
ಇದೇ ವೇಳೆ ಕಾಂಗ್ರೆಸ್ ದೇಶದಲ್ಲಿ ಮುಳುಗುವ ಹಡಗು. ಪ್ರಧಾನಿ ನರೇಂದ್ರ ಮೋದಿಯವರ ಎದುರು ರಾಹುಲ್ ಗಾಂಧಿ ಸರಿಸಮಾನವಾಗಲು ಸಾಧ್ಯವಿಲ್ಲ. ನರೇಂದ್ರ ಮೋದಿ ವಿರುದ್ಧ ಯಾವುದೇ ಭ್ರಷ್ಟಾಚಾರದ ಆರೊಪಗಳಿಲ್ಲ ಎಂದರು.
ಇದೇ ವೇಳೆ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಪ್ರತಿ ಲೀಟರ್ ಹಾಲಿಗೆ ಪ್ರೋತ್ಸಾಹ ಧನವನ್ನು 7 ರೂಗೆ ಹೆಚ್ಚಿಸುತ್ತೇವೆ. ರೈತಸಿರಿ ಯೋಜನೆಯಡಿ ಪ್ರತಿಹೆಕ್ಟೇರ್ ಗೆ 10 ಸಾವಿರ ಹಣ ನೀಡಲು ಯೋಜನೆ ರೂಪಿಸಿದ್ದೇವೆ ಎಂದು ಹೇಳಿದರು.