ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು , ಬಳಿಕ ರಾಜ್ಯಪಾಲರನ್ನು ಭೇಟಿಯಾಗಿ ದೂರು ನೀಡಿದ್ದು, ಕಾನೂನು ಸುವ್ಯವಸ್ಥೆ ಬಗ್ಗೆ ಗಮನ ಹರಿಸುವಂತೆ ಕಾಂಗ್ರೆಸ್ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಿದರು.
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಜೈನಮುನಿ ಹತ್ಯೆ, ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ನಡೆದಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲದಾಗಿದೆ, ಜನರಿಗೆ ರಕ್ಷಣೆ ಇಲ್ಲದಾಗಿದೆ ಎಂದು ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ಬಳಿಕ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ರಾಜಭವನಕ್ಕೆ ತೆರಳಿದ ಬಿಜೆಪಿ ನಾಯಕರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ರಾಜ್ಯ ಸರ್ಕಾರಕ್ಕೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ನಿರ್ದೇಶನ ನೀಡುವಂತೆ ಮನವಿ ಸಲ್ಲಿಸಿದರು. ಇದೇ ವೇಳೆ ಜೈನಮುನಿ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆಯೂ ಮನವಿ ಮಾಡಿದರು.