ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ದಾಳಿ ನಡೆಸಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ತೀವ್ರಗೊಳಿಸಿದ್ದು, ಗೃಹ ಇಲಾಖೆ, ಪೊಲೀಸ್ ಇಲಾಖೆ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ನಗರ, ಮೈಸೂರು, ಮಂಡ್ಯ, ಚಿತ್ರದುರ್ಗ, ಹಾವೇರಿ, ಕೋಲಾರ, ಚಿಕ್ಕಮಗಳೂರು, ಕೊಡಗು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು ಹಲವೆಡೆ ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರೆ ಇನ್ನು ಕೆಲವೆಡೆ ಕಲ್ಲು ತೂರಾಟದಂತಹ ಘಟನೆ ಕೂಡ ನಡೆದಿದೆ.
ಮಂಡ್ಯ ಜಿಲ್ಲೆಯ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಜಮಾವಣೆಗೊಂಡ ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಫ್ಲೆಕ್ಸ್ ಹಾಗೂ ಭಾವಚಿತ್ರಗಳನ್ನು ಇಟ್ಟು ಮೊಟ್ಟೆ ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಕಾರಿನ ಮೇಲೆ ಒಂದು ಮೊಟ್ಟೆಗೆ ಪ್ರತಿಯಾಗಿ ಸಿಎಂ, ಗೃಹ ಸಚಿವರ ಭಾವಚಿತ್ರಕ್ಕೆ ಹತ್ತು ಮೊಟ್ಟೆ ಎಸೆದಿದ್ದಾಗಿ ಆಕ್ರೋಶ ಹೊರಹಾಕಿದ್ದಾರೆ.
ಮೈಸೂರಿನಲ್ಲಿ ಗೃಹ ಸಚಿವರ ಭಾವಚಿತ್ರಕ್ಕೆ ಮೊಟ್ಟೆ ಎಸೆದು, ಟೈಯರ್ ಗೆ ಬೆಂಕಿ ಹಚ್ಚಿ ಕೈ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ.
ಮತ್ತೊಂದೆಡೆ ಹಾವೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಭುಗಿಲೆದ್ದಿದ್ದು, ಹಾವೇರಿ ನಗರದಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಹಾಗೂ ಕಲ್ಲನ್ನು ಹಿಡಿದು ಬಂದು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಮೂವರು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.