ಭದ್ರಾವತಿ: ಕಾಂಗ್ರೆಸ್ ಪಕ್ಷಕ್ಕೆ ರಾಷ್ಟ್ರೀಯ ನಾಯಕರೇ ಇಲ್ಲ ಎಂಬ ಬಿಜೆಪಿ ಹೇಳಿಕೆಗೆ ತಿರುಗೇಟು ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯ ಬಿಜೆಪಿಗೆ ನಾಯಕತ್ವವಿಲ್ಲದಂತಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.
ಭದ್ರಾವತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಇಲ್ಲ, ಅದಕ್ಕಾಗಿ ಅವರು ಪ್ರಧಾನಿ ಮೋದಿ ಹೆಸರಲ್ಲಿ ಚುನಾವಣೆ ಎದುರಿಸುತ್ತಿದ್ದಾರೆ. ಮೊದಲು ಸಿಎಂ ಬೊಮ್ಮಾಯಿ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದರು. ಈಗ ಪ್ರಧಾನಿ ಮೋದಿ ನಾಯಕತ್ವದಲ್ಲಿ ಚುನಾವಣೆ ಎನ್ನುತ್ತಿದ್ದಾರೆ. ಹೀಗಾಗಿ ರಾಜ್ಯ ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಇದೆ ಎಂಬುದು ಸ್ಪಷ್ಟ ಎಂದರು.
ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ಕಟೀಲ್ ಅವರನ್ನು ಬಿಜೆಪಿಯೇ ಗಂಭೀರವಾಗಿ ಪರಿಗಣಿಸಿಲ್ಲ. ಇನ್ನು ನಾವ್ಯಾಕೆ ಅವರ ಬಗ್ಗೆ ತಲೆ ಕೆಡಿಸಿಕೊಳ್ಳಬೇಕು ಎಂದು ಲೇವಡಿ ಮಾಡಿದ್ದಾರೆ.
ಇನ್ನು ಶಿವಮೊಗ್ಗದಲ್ಲಿ ಬಿಜೆಪಿ ಉದ್ದೇಶಪೂರ್ವಕವಾಗಿ ಕೋಮುಗಲಭೆ ಮಾಡಿಸಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಅಶಾಂತಿ ಸೃಷ್ಟಿಸುತ್ತಿದೆ. ಸಂಜೆ ಆರು ಗಂಟೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುತ್ತಿದ್ದಾರೆ. ಹೀಗಾಗಿ ಇಲ್ಲಿ ಬಂಡವಾಳ ಹೂಡಿಕೆ ಮಾಡಲು ಯಾರೂ ಮುಂದೆ ಬರುತ್ತಿಲ್ಲ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಎಷ್ಟು ಬಂಡವಾಳ ಹೂಡಿಕೆಯಾಗಿದೆ? ಎಷ್ಟು ಯೋಜನೆಗಳು ಜಾರಿಯಾಗಿವೆ? ಎಂದು ಯಡಿಯೂರಪ್ಪ, ಸಂಸದ ರಾಘವೇಂದ್ರ ಹಾಗೂ ಈಶ್ವರಪ್ಪನವರು ಉತ್ತರಿಸಬೇಕು ಎಂದು ಆಗ್ರಹಿಸಿದರು.