ಬೆಂಗಳೂರು: ಮೀಸಲಾತಿ ಪ್ರಮಾಣ ಹೆಚ್ಚಿಸುವ ಪ್ರಸ್ತಾಪ ಇಲ್ಲವೆಂದು ಕೇಂದ್ರ ಸಚಿವರೇ ಹೇಳಿಕೆ ನೀಡುವ ಮೂಲಕ ರಾಜ್ಯ ಬಿಜೆಪಿ ನಾಯಕರ ಪ್ರಚಾರಕ್ಕೆ ಬ್ರೇಕ್ ಹಾಕಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೀಸಲಾತಿ ಪ್ರಮಾಣವನ್ನು ಶೇ.50 ಕ್ಕಿಂತ ಹೆಚ್ಚಿಸುವ ಪ್ರಸ್ತಾಪವಿಲ್ಲ ಎಂದು ಲೋಕಸಭೆಯಲ್ಲಿ ಕೇಂದ್ರ ಸಚಿವರು ತಿಳಿಸಿದ್ದಾರೆ. ಆ ಮೂಲಕ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ನಾಯಕರ ಪ್ರಚಾರದ ಬಲೂನ್ ಗೆ ಕೇಂದ್ರ ಸರ್ಕಾರವೇ ಸೂಜಿ ಚುಚ್ಚಿದೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
ಬಿಜೆಪಿ ಸರ್ಕಾರದ ಮೀಸಲಾತಿ ಹೆಚ್ಚಳದ ನಿರ್ಧಾರ ಇದ್ದದ್ದು ಆ ಸಮುದಾಯಗಳ ಮೇಲಿನ ಕಾಳಜಿಯಿಂದಲ್ಲ. ರಾಜಕೀಯ ಲಾಭದ ದುರುದ್ದೇಶದಿಂದ ಎಂದು ನಾವು ಹೇಳುತ್ತಲೇ ಬಂದಿದ್ದೇವೆ. ಈಗ ಕೇಂದ್ರದ ಬಿಜೆಪಿ ಸರ್ಕಾರವೇ ರಾಜ್ಯ ಬಿಜೆಪಿಯ ಬಣ್ಣ ಬಯಲು ಮಾಡಿದೆ. ಶೇ.50ರ ಒಟ್ಟು ಮೀಸಲಾತಿ ಪ್ರಮಾಣದ ಮಿತಿ ಕಿತ್ತುಹಾಕದೇ ಪರಿಶಿಷ್ಟ ಜಾತಿ, ಪಂಗಡಗಳ ಮೀಸಲಾತಿ ಹೆಚ್ಚಿಸಲು ಹೇಗೆ ಸಾಧ್ಯ? ಕೆಲವರನ್ನು ಕೆಲ ಕಾಲ ಮರಳು ಮಾಡಬಹುದು. ಆದರೆ ಎಲ್ಲರನ್ನೂ ಎಲ್ಲಾ ಕಾಲದಲ್ಲೂ ಮರಳು ಮಾದಲು ಸಾಧ್ಯವಿಲ್ಲ ಎಂದು ಟಾಂಗ್ ನೀಡಿದ್ದಾರೆ.