ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನಾಯಕ ರಾಹುಲ್ ಗಾಂಧಿಯವರ ವಿಚಾರಣೆ ನಡೆಸುತ್ತಿದೆ. ಸೋಮವಾರ 10 ಗಂಟೆಗಳ ಕಾಲ, ಮಂಗಳವಾರ 9 ಗಂಟೆಗಳ ಕಾಲ ರಾಹುಲ್ ಗಾಂಧಿಯವರ ವಿಚಾರಣೆ ನಡೆಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸತತ ಮೂರನೇ ದಿನವಾದ ಇಂದೂ ಕೂಡ ಅವರನ್ನು ವಿಚಾರಣೆಗೆ ಕರೆದಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ರಾಹುಲ್ ಗಾಂಧಿಯವರು ವಿಚಾರಣೆಗಾಗಿ ಹಾಜರಾಗಬೇಕಿದ್ದು, ಇದರ ಮಧ್ಯೆ ತಮ್ಮ ನಾಯಕನ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ಇಂದೂ ಕೂಡ ಮುಂದುವರಿಯಲಿದ್ದು, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಮಂಗಳವಾರದಂದು ಪ್ರತಿಭಟನೆಯ ನಡೆಸುತ್ತಿದ್ದ ವೇಳೆ ಸಂಸದ ಡಿಕೆ ಸುರೇಶ್ ಅವರ ಮೇಲೆ ದೆಹಲಿ ಪೊಲೀಸರು ಹಲ್ಲೆ ನಡೆಸಿರುವ ಕುರಿತು ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು, ಒಬ್ಬ ಜನಪ್ರತಿನಿಧಿಯ ಪರಿಸ್ಥಿತಿಯೇ ಹೀಗಾದರೆ ಇನ್ನು ಶ್ರೀ ಸಾಮಾನ್ಯರ ಪಾಡೇನು ಎಂದು ಹಲವರು ಪ್ರಶ್ನಿಸುತ್ತಿದ್ದಾರೆ.