
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಿಂದ ಕಣಕ್ಕಿಳಿಯಲು ಲಕ್ಷ್ಮಣ ಸವದಿ ಹಾಗೂ ಮಹೇಶ್ ಕುಮಟಳ್ಳಿ ಆಕಾಂಕ್ಷಿಗಳಾಗಿದ್ದು, ಈ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರ ಬಿಜೆಪಿ ನಾಯಕರಿಗೆ ತಲೆ ನೋವಾಗಿ ಪರಿಣಮಿಸಿದೆ.
ತಮ್ಮ ಆಪ್ತ ಮಹೇಶ್ ಕುಮಟಳ್ಳಿ ಅವರಿಗೆ ಟಿಕೆಟ್ ಕೊಡಿಸಲು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪಟ್ಟು ಹಿಡಿದಿದ್ದು, ಲಕ್ಷ್ಮಣ ಸವದಿ ಕೂಡ ಟಿಕೆಟ್ ಗಾಗಿ ಒತ್ತಡ ಹೇರುತ್ತಿದ್ದಾರೆ. ಇದರ ಮಧ್ಯೆ ಮಹೇಶ್ ಕುಮಟಳ್ಳಿಯವರಿಗೇ ಬಿಜೆಪಿ ಟಿಕೆಟ್ ಸಿಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಹೀಗಾಗಿ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಅಥಣಿಯಲ್ಲಿ ಮಾತನಾಡಿರುವ ಅವರು, ಟಿಕೆಟ್ ಹಂಚಿಕೆ ವಿಚಾರವಾಗಿ ಪಕ್ಷದ ನಾಯಕರ ತೀರ್ಮಾನ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಪರೋಕ್ಷ ಸಂದೇಶ ರವಾನಿಸಿದ್ದಾರೆ.
ಅಲ್ಲದೆ ಅಥಣಿ ಕ್ಷೇತ್ರದ ಸೋಲಿನ ಪಟ್ಟವನ್ನು ತಮ್ಮ ತಲೆಗೆ ಕಟ್ಟಲು ಈಗಾಗಲೇ ಕೆಲವರು ಸಿದ್ಧತೆ ನಡೆಸಿದ್ದಾರೆ. ಈ ಕುರಿತಂತೆ ರಮೇಶ್ ಜಾರಕಿಹೊಳಿಯವರ ಜೊತೆ ಚರ್ಚೆ ನಡೆಸಲಿದ್ದೇನೆ ಎಂದು ಲಕ್ಷ್ಮಣ ಸವದಿ ತಿಳಿಸಿದ್ದಾರೆ.