ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯ ಸಾಧಿಸಿದ್ದು ಈಗಾಗಲೇ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟ ಸಹೋದ್ಯೋಗಿಗಳು ಪ್ರಮಾಣವಚನ ಸ್ವೀಕರಿಸಿದ್ದು, ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದ್ದ ಗ್ಯಾರಂಟಿಗಳ ಜಾರಿಗೆ ಸಿದ್ಧತೆ ನಡೆದಿದೆ.
ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಹಿರಿಯ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಅವರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಿ ಕೊಡಬೇಕೆಂಬ ಮಾತು ಕೇಳಿ ಬರುತ್ತಿದ್ದು, ಇದರ ಮಧ್ಯೆ ಇಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉಭಯ ನಾಯಕರುಗಳ ನಿವಾಸಕ್ಕೆ ಭೇಟಿ ನೀಡುತ್ತಿದ್ದು ಕುತೂಹಲ ಕೆರಳಿಸಿದೆ.
ಆಂಧ್ರಪ್ರದೇಶದ ರಾಜಮಂಡ್ರಿಯಿಂದ ಮಂಗಳವಾರ ರಾತ್ರಿಯೇ ಬೆಳಗಾವಿಗೆ ಆಗಮಿಸಿರುವ ಡಿ.ಕೆ. ಶಿವಕುಮಾರ್, ಲಕ್ಷ್ಮಣ ಸವದಿ ಅವರ ಬೆಳಗಾವಿ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಹುಬ್ಬಳ್ಳಿಗೆ ತೆರಳಿ ಜಗದೀಶ್ ಶೆಟ್ಟರ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಲಿದ್ದಾರೆ. ಈ ವೇಳೆ ಮಹತ್ವದ ಮಾತುಕತೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.