ಜೂನ್ 13ರ ಸೋಮವಾರದಂದು ನಡೆದಿದ್ದ ವಿಧಾನಪರಿಷತ್ತಿನ ಎರಡು ಪದವೀಧರ ಕ್ಷೇತ್ರ ಮತ್ತು ಎರಡು ಶಿಕ್ಷಕರ ಕ್ಷೇತ್ರದ ಚುನಾವಣಾ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದ್ದು, ಫಲಿತಾಂಶದ ಕುರಿತು ಅಭ್ಯರ್ಥಿಗಳ ಎದೆಯಲ್ಲಿ ಢವಢವ ಶುರುವಾಗಿದೆ.
ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಅದಕ್ಕೂ ಮುನ್ನ ಅಂದರೆ 7.45 ಕ್ಕೆ ಮತಪೆಟ್ಟಿಗೆಗಳನ್ನು ಹೊರತೆಗೆಯಲಾಗುತ್ತದೆ. ಮತ ಎಣಿಕೆ ಕಾರ್ಯಕ್ಕೆ ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಮತ ಎಣಿಕೆ ಕೇಂದ್ರಗಳಲ್ಲಿ ಮೊಬೈಲ್ ಹಾಗೂ ಶಾಯಿ ಪೆನ್ ನಿರ್ಬಂಧಿಸಲಾಗಿದೆ.
ಮತ ಎಣಿಕೆ ಕೇಂದ್ರಕ್ಕೆ ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಾಗಿದ್ದು, ನೀರಿನ ಬಾಟಲ್ ತರುವುದನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಹಾಗೂ ಮತ ಎಣಿಕೆ ಏಜೆಂಟರುಗಳಿಗೆ ಪಾವತಿ ಆಧಾರದ ಮೇಲೆ ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ.
ಈ ಚುನಾವಣೆಯಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಒಟ್ಟು 49 ಅಭ್ಯರ್ಥಿಗಳು ಕಣಕ್ಕಿಳಿದಿದ್ದು, ಸಂಜೆಯೊಳಗಾಗಿ ಫಲಿತಾಂಶ ಹೊರಬೀಳಲಿದೆ.