ತಮ್ಮ ಪುತ್ರ ಪ್ರಶಾಂತ್ ಅವರ ಬೆಂಗಳೂರಿನ ಕಚೇರಿ ಹಾಗೂ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಕೋಟ್ಯಾಂತರ ರೂಪಾಯಿ ವಶಪಡಿಸಿಕೊಂಡ ನಂತರ ನಾಪತ್ತೆಯಾಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಗೊಳಿಸಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಬಂಧನ ಭೀತಿಯನ್ನು ಎದುರಿಸುತ್ತಿರುವ ಮಾಡಾಳ್ ವಿರೂಪಾಕ್ಷಪ್ಪ ತಮ್ಮ ವಕೀಲರೊಂದಿಗೆ ಚರ್ಚೆ ನಡೆಸಿದ್ದು, ಇಂದು ಲೋಕಾಯುಕ್ತ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ಪತ್ರಿಕಾ ಹೇಳಿಕೆ ನೀಡಿದ ಅವರು ತಮ್ಮ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿದ್ದರು.
ಮಾಡಾಳ್ ವಿರೂಪಾಕ್ಷಪ್ಪ ಇಂದು ವಿಚಾರಣೆಗೆ ಹಾಜರಾಗಲಿದ್ದಾರೆ ಎಂಬ ಮಾಹಿತಿ ಲೋಕಾಯುಕ್ತ ಪೊಲೀಸರಿಗೂ ಬಂದಿದೆ ಎನ್ನಲಾಗಿದ್ದು, ಹೀಗಾಗಿ ಪ್ರಶ್ನಾವಳಿಯನ್ನು ಸಿದ್ಧಪಡಿಸಿಕೊಂಡು ವಿಚಾರಣೆ ನಡೆಸಲು ಮುಂದಾಗಿದ್ದಾರೆ. ಅದರಲ್ಲೂ ಅವರ ಪುತ್ರನ ಮನೆಯಲ್ಲಿ ಪತ್ತೆಯಾಗಿರುವ ಬೃಹತ್ ಮೊತ್ತದ ಹಿನ್ನೆಲೆ ಏನು ಎಂಬುದು ಸೇರಿದಂತೆ ಹಲವು ಪ್ರಶ್ನಾವಳಿಗಳು ವಿರೂಪಾಕ್ಷಪ್ಪ ಅವರಿಗೆ ಎದುರಾಗಲಿವೆ ಎಂದು ಹೇಳಲಾಗಿದೆ.