ಶುಕ್ರವಾರದಂದು ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದ್ದು, ತಾವು ಈವರೆಗೆ ಪ್ರತಿನಿಧಿಸುತ್ತಿದ್ದ ಶಿಕಾರಿಪುರ ಕ್ಷೇತ್ರವನ್ನು ತಮ್ಮ ಕಿರಿಯ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಬಿಟ್ಟುಕೊಡುವುದಾಗಿ ಘೋಷಿಸಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅವರೇ ಅಭ್ಯರ್ಥಿ ಎಂದು ಹೇಳಿದ್ದರು.
ಚುನಾವಣಾ ರಾಜಕೀಯದಿಂದ ನಿವೃತ್ತರಾಗುವ ಯಡಿಯೂರಪ್ಪ ಅವರ ಈ ಹಠಾತ್ ಘೋಷಣೆ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನವನ್ನು ಸೃಷ್ಟಿಸಿತ್ತಲ್ಲದೇ, ಹಲವು ಊಹಾಪೋಹಗಳಿಗೂ ಕಾರಣವಾಗಿತ್ತು. ಈ ಬೆಳವಣಿಗೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರು ಮಹತ್ವದ ಮೀಟಿಂಗ್ ನಡೆಸಿದ್ದರು.
ಇದೀಗ ಶಿಕಾರಿಪುರದಲ್ಲಿದ್ದ ಯಡಿಯೂರಪ್ಪನವರ ಕಿರಿಯ ಪುತ್ರ ಬಿ.ವೈ. ವಿಜಯೇಂದ್ರ ದಿಢೀರ್ ಬೆಂಗಳೂರಿಗೆ ತೆರಳಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಮೂಲಗಳ ಪ್ರಕಾರ ಶುಕ್ರವಾರ ನಡೆದ ಘಟನಾವಳಿಗಳ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ವಿಜಯೇಂದ್ರ ಅವರನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.