ಬಜರಂಗ ದಳ ಕಾರ್ಯಕರ್ತ ಹರ್ಷ ಅವರ ಸಾವಿನ ನಂತರ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ನಗರದಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದ್ದು, ಇದರ ನಿಯಂತ್ರಣಕ್ಕೆ ಪೊಲೀಸರು ಸೂಕ್ತ ಕ್ರಮ ಕೈಗೊಂಡಿದ್ದಾರೆ.
ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಇದರ ಜೊತೆಗೆ ಶಿವಮೊಗ್ಗ ನಗರದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಅಲ್ಲದೇ ಶಾಲಾ – ಕಾಲೇಜುಗಳಿಗೆ ಇಂದೂ ಸಹ ರಜೆ ಘೋಷಿಸಲಾಗಿದ್ದು, ಸಾರ್ವಜನಿಕರು ಅಗತ್ಯ ವಸ್ತುಗಳನ್ನು ಖರೀದಿಸಲು ಬೆಳಿಗ್ಗೆ 6 ಗಂಟೆಯಿಂದ 9 ಗಂಟೆವರೆಗೆ ಅವಕಾಶ ಕಲ್ಪಿಸಲಾಗಿದೆ.
ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ಕೈಗೊಂಡಿದ್ದ ಪೊಲೀಸರು ಆರು ಮಂದಿ ಹಂತಕರನ್ನು ಈಗಾಗಲೇ ಹೆಡೆಮುರಿ ಕಟ್ಟಿದ್ದಾರೆ.