alex Certify BIG NEWS: ಶಿವಮೊಗ್ಗದಲ್ಲಿ ಕಠಿಣ ಲಾಕ್ಡೌನ್ ಮುಂದುವರಿಕೆ, ಬೆಳಗ್ಗೆ 6 ರಿಂದ 9 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿವಮೊಗ್ಗದಲ್ಲಿ ಕಠಿಣ ಲಾಕ್ಡೌನ್ ಮುಂದುವರಿಕೆ, ಬೆಳಗ್ಗೆ 6 ರಿಂದ 9 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ

ಶಿವಮೊಗ್ಗ: ಜಿಲ್ಲೆಯಲ್ಲಿ ಕರೋನಾ ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್‍ಡೌನ್ ಈಗಿರುವಂತೆ ಒಂದು ವಾರ ಕಾಲ ಮುಂದುವರೆಯಲಿದ್ದು, ಅಗತ್ಯ ವಸ್ತುಗಳ ವ್ಯಾಪಾರಕ್ಕೆ ಬೆಳಿಗ್ಗೆ 6 ರಿಂದ 9 ರ ವರೆಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಅವರು ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಾಕ್‍ಡೌನ್ ಮುಂದುವರಿಕೆ ಕುರಿತು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಜಿಲ್ಲೆಯಲ್ಲಿ ಕರೋನಾ ಪಾಸಿಟಿವಿ ಪ್ರಮಾಣ ನಿಧಾನವಾಗಿ ಕಡಿಮೆಯಾಗುತ್ತಿದೆ. ಆದರೆ, ಶಿವಮೊಗ್ಗ ನಗರದಲ್ಲಿ ಈಗಲೂ ಶೇ.13 ರ ಆಸುಪಾಸಿನಲ್ಲಿದ್ದು, ಭದ್ರಾವತಿಯಲ್ಲಿ ಸುಮಾರು ಶೇ.10 ರಷ್ಟು ಪಾಸಿಟಿವಿಟಿ ಪ್ರಮಾಣ ಇದೆ. ಈ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರಗಳ ಕಾಲ ಲಾಕ್‍ಡೌನ್ ಇದೇ ರೀತಿ ಮುಂದುವರೆಸಲು ಎಲ್ಲಾ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಒಪ್ಪಿಗೆ ಸೂಚಿಸಿದ್ದಾರೆ ಎಂದರು.

ಲಾಕ್‍ಡೌನ್ ಜಾರಿಯಲ್ಲಿರುವ ಜಿಲ್ಲೆಗಳಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ, ಅನುಮತಿ ನೀಡಲಾಗಿರುವ ಅಗತ್ಯ ವಸ್ತುಗಳ ವ್ಯಾಪಾರಕ್ಕೆ ಮಾತ್ರ ಅವಕಾಶವಿದೆ. ಪ್ರಸ್ತುತ ತರಕಾರಿ, ದಿನಸಿಯಂತಹ ಅಗತ್ಯ ವಸ್ತುಗಳ ಮಾರಾಟಕ್ಕೆ ಬೆಳಿಗ್ಗೆ 6 ರಿಂದ 8 ರವರೆಗೆ ಅವಕಾಶವಿದ್ದು, ಅದನ್ನು ಒಂದು ಗಂಟೆ ವಿಸ್ತರಿಸಲಾಗಿದೆ ಎಂದರು.

ಇನ್ನುಳಿದಂತೆ ಕೈಗಾರಿಕಾ ಚಟುವಟಿಕೆಗಳಿಗೆ ಈಗಿರುವಂತೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಸಗಟು ದಿನಸಿ ವ್ಯಾಪಾರಕ್ಕೆ ಬುಧವಾರ ಮತ್ತು ಶನಿವಾರ ಬೆಳಿಗ್ಗೆ 6 ರಿಂದ 9 ರವರೆಗೆ ಅವಕಾಶವಿದೆ. ಅಡಿಕೆ ಮಂಡಿಯಲ್ಲಿ ಸಗಟು ವ್ಯಾಪಾರಕ್ಕೆ ಹಾಗೂ ಟೆಂಡರ್‍ನಲ್ಲಿ ಭಾಗವಹಿಸುವವರಿಗೆ ಪಾಸು ನೀಡಲಾಗುವುದು. ಎಪಿಎಂಸಿಯಲ್ಲಿ ಬೆಳಿಗ್ಗೆ 6 ರಿಂದ 8 ರವರೆಗೆ ವ್ಯವಹಾರಕ್ಕೆ ಅವಕಾಶವಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾಗಿರುವ ಆದ್ಯತಾ ವಲಯದ ಫಲಾನುಭವಿಗಳಿಗೆ ಹಂತ ಹಂತವಾಗಿ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆ ಜಾರಿಯಲ್ಲಿದೆ. ಮುಂದಿನ ದಿನಗಳಲ್ಲಿ ಇದನ್ನು ಇನ್ನಷ್ಟು ವ್ಯವಸ್ಥಿತಗೊಳಿಸಿ ಪ್ರತಿಯೊಬ್ಬರಿಗೂ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಶಾಸಕರಾದ ಅರಗ ಜ್ಞಾನೇಂದ್ರ, ಅಶೋಕ ನಾಯ್ಕ್, ಆಯನೂರು ಮಂಜುನಾಥ, ಪ್ರಸನ್ನ ಕುಮಾರ್, ರುದ್ರೇಗೌಡ, ಆರ್ಯವೈಶ್ಯ ನಿಗಮದ ಅರುಣ್, ದತ್ತಾತ್ರೇಯ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಎಸ್ಪಿ ಲಕ್ಷ್ಮೀ ಪ್ರಸನ್ನ, ಸಿಇಒ ವೈಶಾಲಿ, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...