ಸ್ವಾತಂತ್ರ್ಯ ದಿನದಂದು ನಗರದಲ್ಲಿ ವೀರ ಸಾವರ್ಕರ್ ಫೋಟೋ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಅಹಿತಕರ ಘಟನೆಗಳ ನಂತರ ಉದ್ವಿಗ್ನಗೊಂಡಿದ್ದ ಶಿವಮೊಗ್ಗ ಸಹಜ ಸ್ಥಿತಿಗೆ ಮರಳಿದೆ. ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಮುಂದುವರೆದಿದೆ.
ಶಾಲಾ, ಕಾಲೇಜುಗಳು ಎಂದಿನಂತೆ ಆರಂಭವಾಗಿದ್ದು, ಬಹುತೇಕ ಎಲ್ಲಾ ಅಂಗಡಿ ಮುಂಗಟ್ಟುಗಳು ತೆರೆದಿದ್ದು, ಜನ ವಾಹನ ಸಂಚಾರ ಎಂದಿನಂತೆಯೇ ಇದೆ. ನಗರದ ಸೂಕ್ಷ್ಮ ಪ್ರದೇಶಗಳು ಸೇರಿದಂತೆ ಎಲ್ಲಾ ಕಡೆ ಪೊಲೀಸ್ ಬಂದೋ ಬಸ್ತ್ ಕೈಗೊಳ್ಳಲಾಗಿದೆ.
ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್, ಪೂರ್ವ ವಲಯ ಐಜಿಪಿ ತ್ಯಾಗರಾಜ್, ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಿ ಪ್ರಸಾದ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಗಾಂಧಿ ಬಜಾರ್, ನೆಹರೂ ರಸ್ತೆ, ಎಂ.ಕೆ.ಕೆ. ರಸ್ತೆ ಮೊದಲಾದ ಕಡೆಗಳಲ್ಲಿ ಪರಿಶೀಲನೆ ನಡೆಸಿದರು.
ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಆರ್.ಎ.ಎಫ್., ಕೆ.ಎಸ್.ಆರ್.ಪಿ., ಡಿಎಆರ್ ಸೇರಿದಂತೆ ಭಾರೀ ಸಂಖ್ಯೆಯ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.