ಬೆಂಗಳೂರು: ಮಾಂಡೌಸ್ ಚಂಡಮಾರುತ ಪರಿಣಾಮವಾಗಿ ರಾಜ್ಯಾದ್ಯಂತ ಶೀತ ಗಾಳಿ, ಮಳೆಯಾಗುತ್ತಿದ್ದು, ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇದೇ ವೇಳೆ ಕೋವಿಡ್ ಸೋಂಕು ಹೆಚ್ಚಾಗುವ ಆತಂಕ ಎದುರಾಗಿದೆ.
ರಾಜ್ಯಾದ್ಯಂತ ಶೀತಗಾಳಿ, ಮಳೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ಚಳಿಗಾಲದ ಜೊತೆಗೆ ಚಂಡಮಾರುತದ ಪರಿಣಾಮವಾಗಿ ಗಾಳಿ, ಮಳೆ ಹೆಚ್ಚಾಗಿದೆ. ಜನರು ಆರೋಗ್ಯದ ಬಗ್ಗೆ ನಿಗಾ ವಹಿಸಬೇಕು. ವಿಶೇಷವಾಗಿ ಮಕ್ಕಳು, ವೃದ್ಧರು, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಹೆಚ್ಚು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವುದು ಉತ್ತಮ. ಕೆಲವೆಡೆ ಶಾಲಾ-ಕಾಲೇಜಿಗೆ ರಜೆ ನೀಡಲಾಗಿದೆ. ಜನರು ದೇಹವನ್ನು ಬೆಚ್ಚಗೆ ಇರುವಂತೆ ನೋಡಿಕೊಳ್ಳಿ ಎಂದು ತಿಳಿಸಿದ್ದಾರೆ.
ಶೀತಗಾಳಿ, ಮಳೆಯಿಂದಾಗಿ ಜನರಲ್ಲಿ ಉಸಿರಾಟದ ತೊಂದರೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದಲೂ ಹೊಸ ಮಾರ್ಗಸೂಚಿ ಹೊರಡಿಸಲಾಗಿದೆ. ಜಿಲ್ಲಾ ಆರೋಗ್ಯಾಧಿಕಾರಿಗಳಿಗೂ ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇವೆ. ಆಸ್ಪತ್ರೆಗಳಲ್ಲಿ ಸಿದ್ಧತೆ ಮಾಡಿಕೊಳ್ಳುವಂತೆ ವೈದ್ಯರಿಗೂ ಸೂಚಿಸಲು ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ.