ಕೊಲಂಬೊ: ಆರ್ಥಿಕ ಬಿಕ್ಕಟ್ಟು, ಆಡಳಿತಾತ್ಮಕ ದಿವಾಳಿತನದಿಂದ ಕಂಗೆಟ್ಟಿರುವ ಶ್ರೀಲಂಕಾದಲ್ಲಿ ಮತ್ತೆ ಜನಾಕ್ರೋಶ ಭುಗಿಲೆದ್ದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಶ್ರೀಲಂಕಾದಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.
ಶ್ರೀಲಂಕಾ ಪ್ರಧಾನಿ ಕಚೇರಿಯಿಂದ ಈ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಆರ್ಥಿಕ ಬಿಕ್ಕಟ್ಟಿನಿಂದ ಆಕ್ರೋಶಗೊಂಡಿರುವ ಜನರು ಇಂದು ಕೂಡ ಕೊಲಂಬೊದಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಪ್ರಧಾನಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಅಶ್ರುವಾಯು ಪ್ರಯೋಗ ಮಾಡಿದ್ದಾರೆ.
ಇನ್ನೊಂದೆಡೆ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಕುಟುಂಬ ಸಮೇತ ದೇಶಬಿಟ್ಟು ಪಲಾಯನಗೈದಿದ್ದು, ಮಾಲ್ಡಿವ್ಸ್ ನಲ್ಲಿ ವಾಸವಾಗಿದ್ದಾರೆ ಎನ್ನಲಾಗಿದೆ. ರಾಜಪಕ್ಸೆ ಪಲಾಯನ ಬೆನ್ನಲ್ಲೇ ಇನ್ನಷ್ಟು ಆಕ್ರೋಶಗೊಂಡಿರುವ ಜನರು ದೇಶದ ಮೂಲೆ ಮೂಲೆಗಳಿಂದ ಕೊಲಂಬೊಗೆ ಲಗ್ಗೆ ಇಡುತ್ತಿದ್ದು, ಪ್ರಧಾನಿ ರಾನಿಲ್ ವಿಕ್ರಮ ಸಿಂಘೆ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.