ಬೆಳಗಾವಿ: ರಾಜ್ಯ ಸಚಿವ ಸಂಪುಟ ಪುನಾರಚನೆ ಚರ್ಚೆ ಬೆನ್ನಲ್ಲೇ ಕುಂದಾನಗರಿಯಲ್ಲಿ ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಆಹಾರ ಸಚಿವ ಉಮೇಶ್ ಕತ್ತಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ.
ಶಾಸಕರಾದ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಸಹೋದರರನ್ನು ಹೊರಗಿಟ್ಟು ಸಚಿವ ಉಮೇಶ್ ಕತ್ತಿ ಬೆಳಗಾವಿಯ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಬೆಳಗಾವಿ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ, ಎರಡು ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಡುವ ಬಗ್ಗೆ ಚರ್ಚೆ ನಡೆದಿದೆ. ಪ್ರಮುಖವಾಗಿ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ, ಪಾಲಿಕೆ ಮೇಯರ್, ಉಪಮೇಯರ್ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆದಿದ್ದು, ವರಿಷ್ಠರ ಮುಂದೆ ಬೇಡಿಕೆ ಇಡಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಸಭೆಯಲ್ಲಿ ಮಾಜಿ ಸಚಿವ ಲಕ್ಷ್ಮಣ ಸವದಿ, ಸಂಸದ ಅಣ್ಣಾಸಾಹೇಬ ಜೊಲ್ಲೆ, ಈರಣ್ಣ ಕಡಾಡಿ, ಅಭಯ್ ಪಾಟೀಲ್, ಅನಿಲ್ ಬೆನಕೆ, ಮಹಾಂತೇಶ ದೊಡ್ಡಗೌಡರ, ಪಿ. ರಾಜೀವ್, ಮಹಾಂತೇಶ ಕವಟಗಿಮಠ ಮೊದಲಾದವರು ಭಾಗವಹಿಸಿದ್ದರು.