ಬೆಂಗಳೂರು: ವಿಧಾನಪರಿಷತ್ ಕಲಾಪದ ವೇಳೆಯೂ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಒತ್ತಾಯದ ಪ್ರತಿಧ್ವನಿ ಕೇಳಿಬಂದಿದೆ. ಕಾಂಗ್ರೆಸ್ ಸದಸ್ಯರು ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.
ವಿಧಾನ ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆಯೇ ಭಿತ್ತಿಪತ್ರ ಹಿಡಿದು ಕಲಾಪದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಸದಸ್ಯರು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು.
ಪರಿಷತ್ ಗೆ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಆಗಮಿಸಿದ್ದು, ಸಚಿವ ಈಶ್ವರಪ್ಪ ವಿರುದ್ಧ ರಾಷ್ಟ್ರದ್ರೋಹದ ಕೇಸ್ ದಾಖಲಿಸಬೇಕು. ಸಂಪುಟದಿಂದ ಅವರನ್ನು ವಜಾಗೊಳಿಸಬೇಕು ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಆಗ್ರಹಿಸಿದರು. ಇದಕ್ಕೆ ಧ್ವನಿಗೂಡಿಸಿದ ಪ್ರಕಾಶ್ ರಾಥೋಡ್, ಸಚಿವ ಈಶ್ವರಪ್ಪ ಒಮ್ಮೆ ನೀಡಿದ ಹೇಳಿಕೆ ಬದಲಾಯಿಸಲು ಸಾಧ್ಯವಿಲ್ಲ. ಕೊಲೆ ಮಾಡಿ, ಒಳ್ಳೆಯ ಉದ್ದೇಶಕ್ಕೆ ಕೊಲೆ ಮಾಡಿದೆ ಎಂದು ಸಮರ್ಥಿಸಿಕೊಂಡರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ.
Shocking: ಪತ್ನಿಯಂದಿರನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳಲು ಪತಿಯಂದಿರಿಗೆ ವಿಚಿತ್ರ ಸಲಹೆ ನೀಡಿದ ಸಚಿವೆ….! ವಿಡಿಯೋ ಹೊರ ಬೀಳುತ್ತಿದ್ದಂತೆ ಶುರುವಾಯ್ತು ವಿರೋಧ
ಇದೇ ವೇಳೆ ಕಾಂಗ್ರೆಸ್ ಇತರ ಸದಸ್ಯರು ಸಚಿವ ಈಶ್ವರಪ್ಪ ವಿರುದ್ಧ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದು, ಸಚಿವರ ವಿರುದ್ಧ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈಶ್ವರಪ್ಪ ಅವರನ್ನು ಸಂಪುಟದಿಂದ ಕೈಬಿಡುವವರೆಗೂ ಹೋರಾಟ ಮುಂದುವರೆಸುವುದಾಗಿ ಕಾಂಗ್ರೆಸ್ ಸದಸ್ಯರು ಪಟ್ಟು ಹಿಡಿದಿದ್ದಾರೆ. ಸದನದಲ್ಲಿ ಗದ್ದಲ-ಕೋಲಾಹಲ ಹೆಚ್ಚುತ್ತಿದ್ದಂತೆ ಸಭಾಪತಿ ಬಸವರಾಜ್ ಹೊರಟ್ಟಿ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ.