
ಬೆಂಗಳೂರು: ಈಬಾರಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿ 4 ತಂಡಗಳಾಗಿ ವಿಜಯಸಂಕಲ್ಪ ಯಾತ್ರೆ ಮಾಡಲಾಗಿದ್ದು, ಜನರಿಂದ ಉತ್ತಮ ಬೆಂಬಲ ಸಿಕ್ಕಿದೆ. ಬಿಜೆಪಿ ಮತ್ತೆ ಅದಿಕಾರಕ್ಕೆ ಬರುವುದು ಸೂರ್ಯ, ಚಂದ್ರ ಇರುವಷ್ಟೇ ಸತ್ಯ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಯಡಿಯೂರಪ್ಪ, ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಎಲ್ಲಾ ಸಂಸದರ ಸಭೆ ನಡೆಸಲಾಗುತ್ತದೆ. ಸಿಎಂ ಬಸವರಾಜ್ ಬೊಮ್ಮಾಯಿ ಮೀಸಲಾತಿ ಹೆಚ್ಚಳ ಮಾಡಿರುವುದು ಎಲ್ಲಾ ವರ್ಗದವರಿಗೆ ನ್ಯಾಯ ಒದಗಿಸುವ ಕ್ರಮವಾಗಿದೆ. ನಾನು ಜನರಿಗಾಗಿ ಹಲವು ಕಾರ್ಯಕ್ರಮಗಳನ್ನು ಸಿಎಂ ಆಗಿದ್ದ ಅವಧಿಯಲ್ಲಿ ಜಾರಿಗೆ ತಂದಿದ್ದೇನೆ ಎಂದರು.
ಸಧ್ಯದಲ್ಲಿಯೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಈ ನಿಟ್ಟಿನಲ್ಲಿ ಹೈಕಮಾಂಡ್ ಸಿದ್ಧತೆ ನಡೆಸಿದೆ. ನಂತರದಲ್ಲಿ ಎಲ್ಲಾ ಬಿಜೆಪಿ ಮುಖಂಡರು, ಸಂಸದರು ರಾಜ್ಯಾದ್ಯಂತ ಪ್ರವಾಸ ಮಾಡುತ್ತೇವೆ. ರಾಜ್ಯದಲ್ಲಿ 130 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಹೇಳಿದರು.