ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಚಿತ್ರೀಕರಣ, ಫೋಟೋ ನಿಷೇಧ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟೀಕರಣ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಸರ್ಕಾರಿ ಕಚೇರಿಗಳಲ್ಲಿ ವಿಡಿಯೋ, ಫೋಟೋ ಚಿತ್ರೀಕರಣ ನಿಷೇಧ ನನ್ನ ಗಮನಕ್ಕೆ ಬಂದಿರಲಿಲ್ಲ. ಹೀಗಾಗಿ ನಿಷೇಧ ಆದೇಶ ವಾಪಸ್ ಪಡೆಯಲಾಗಿದೆ.
ನಮ್ಮ ಸರ್ಕಾರ ಪಾರದರ್ಶಕವಾಗಿ ನಡೆಯುತ್ತಿದೆ. ಯಾವುದನ್ನೂ ಮುಚ್ಚಿಡುವಂತಹ ಪ್ರಶ್ನೆಯೇ ಇಲ್ಲ. ಹೀಗಾಗಿ ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ಚಿತ್ರೀಕರಣ ನಿಷೇಧ ಅಗತ್ಯವಿಲ್ಲ ಎಂದರು.
ಇನ್ನು ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ರ್ಯಾಲಿ ನಡೆಸಲಾಗುವುದು. ನಿನ್ನೆ ಪ್ರಮುಖರ ಜತೆ ಚಿಂತನಾ ಸಭೆ ನಡೆದಿದೆ. ಸಮನ್ವಯತೆಯಿಂದ ಹೋಗುವ ಬಗ್ಗೆ ಚರ್ಚೆಯಾಗಿದೆ. ಸರ್ಕಾರದ ಯೋಜನೆ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಚರ್ಚಿಸಲಾಗಿದ್ದು, ಮುಂದಿನ ದಿನಗಳಲ್ಲಿ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳಲಾಗುವುದು ಎಂದು ತಿಳಿಸಿದರು.