ಬೆಂಗಳೂರು: ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಅಭಿವೃದ್ಧಿಗಾಗಿ ದಾನ, ದೇಣಿಗೆಗಳನ್ನು ಸ್ವೀಕರಿಸುವ ಸಲುವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಎಸ್ ಡಿ ಎಂ ಸಿ ಗಳಿಗೆ ಸುತ್ತೋಲೆ ಹೊರಡಿಸಿದ್ದು, ಭಾರಿ ವಿವಾದಕ್ಕೆ ಕಾರಣವಾಗಿದೆ.
ಸರ್ಕಾರಿ ಶಾಲೆಗಳ ಶೌಚಾಲಯ, ವಿದ್ಯುತ್ ಬಿಲ್, ಕುಡಿಯುವ ನೀರು ನಿರ್ವಹಣೆಗೆ ಮಾಸಿಕ 100 ರೂಪಾಯಿಯನ್ನು ವಿದ್ಯಾರ್ಥಿಗಳ ಪೋಷಕರಿಂದ ದೇಣಿಗೆ ರೂಪದಲ್ಲಿ ಪಡೆಯಲು ಎಸ್ ಡಿ ಎಂ ಸಿ ಗಳಿಗೆ ಅವಕಾಶ ನೀಡಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ಸುತ್ತೋಲೆಗೆ ಪೋಷಕರು, ರಾಜಕೀಯ ಪಕ್ಷಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಡ ಪೋಷಕರು ಉಚಿತ ಶಿಕ್ಷಣ ಎಂದು ಸರ್ಕಾರಿ ಶಾಲೆಗಳಿಗೆ ಕಳುಹಿಸುತ್ತಾರೆ. ಆದರೆ ಸರ್ಕಾರವೇ ಈಗ ಬಡ ಪೋಷಕರಿಂದ ವಸೂಲಿಗೆ ಇಳಿದರೆ ಹೇಗೆ ? ಇದು ಉಚಿತ ಹಾಗೂ ಕಡ್ಡಾಯ ಶಿಕ್ಷಣ 2009ರ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಕಿಡಿಕಾರಿದ್ದಾರೆ.