ಬೆಂಗಳೂರು: 7ನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಮುಷ್ಕರ ಆರಂಭಿಸಿದ್ದು, ಬಹುತೇಕ ಎಲ್ಲಾ ಸರ್ಕಾರಿ ಸೇವೆಗಳು ಬಂದ್ ಆಗಿವೆ.
ಆಸ್ಪತ್ರೆಗಳಲ್ಲಿ ತುರ್ತು ಸೇವೆ ಹೊರತುಪಡಿಸಿ ಎಲ್ಲಾ ಸೇವೆಗಳು ಸ್ಥಗಿತಗೊಂಡಿದ್ದು, ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ಆಸ್ಪತ್ರೆಗಳಿಗೆ ದೂರದೂರುಗಳಿಂದ ಬಂದಿರುವ ರೋಗಿಗಳು ವೈದ್ಯರ ಸಂಪರ್ಕ ಸಿಗದೇ ಸಂಕಷ್ಟಕ್ಕೀಡಾಗಿದ್ದಾರೆ.
105 ಪ್ರಾಥಮಿಕ ಆರೋಗ್ಯ ಕೇಂದ್ರ, 19 ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆಗಳ ಓಪಿಡಿ ಇರುವುದಿಲ್ಲ ಎಂದು ಬೆಂಗಳೂರಿನ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ವಿವೇಕ್ ದೊರೆ ತಿಳಿಸಿದ್ದಾರೆ.
7ನೇ ವೇತನ ಆಯೋಗದ ಮಧ್ಯಂತರ ಆದೇಶ ಜಾರಿಗೊಳಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಸರ್ಕಾರಿ ನೌಕರರು ಕೆಲಸಕ್ಕೆ ಗೈರಾಗುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು, ಶಾಲೆಗಳಲ್ಲಿ ಶಿಕ್ಷಕರು, ಆಸ್ಪತ್ರೆಗಳಲ್ಲಿ ವೈದ್ಯರು ಕೆಲಸದಿಂದ ದೂರ ಇದ್ದು ಮುಷ್ಕರ ನಡೆಸಿದ್ದಾರೆ.