ವಿಧಾನಸಭಾ ಚುನಾವಣೆ ಪೂರ್ವದಲ್ಲಿ ತಾವು ನೀಡಿದ ಭರವಸೆಯಂತೆ ಅಧಿಕಾರಕ್ಕೆ ಬರುತ್ತಿದ್ದಂತೆ ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ ಮೊದಲಾದ ಯೋಜನೆಗಳನ್ನು ಆರಂಭಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಇದೀಗ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ.
ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲೇ ಸೂಕ್ತ ಪರಿಹಾರ ಒದಗಿಸುವ ಸಲುವಾಗಿ ಇನ್ನು ಮುಂದೆ ಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ‘ಜನತಾ ದರ್ಶನ’ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ.
ಈಗಾಗಲೇ ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಎಲ್ಲ ಜಿಲ್ಲೆಗಳ ಉಸ್ತುವಾರಿ ಕಾರ್ಯದರ್ಶಿ, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚಿಸಿದ್ದು, ಅಲ್ಲದೆ ಜಿಲ್ಲಾಧಿಕಾರಿಗಳು ಪ್ರತಿ 15 ದಿನಗಳಿಗೊಮ್ಮೆ ಜಿಲ್ಲಾ ವ್ಯಾಪ್ತಿಯ ಒಂದು ತಾಲೂಕು ಆಯ್ಕೆ ಮಾಡಿಕೊಂಡು ತಾಲೂಕು ಮಟ್ಟದಲ್ಲಿ ‘ಜನತಾ ದರ್ಶನ’ ಹಮ್ಮಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಸೆಪ್ಟೆಂಬರ್ 25ರಂದು ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜನತಾ ದರ್ಶನ ಹಮ್ಮಿಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೂಚಿಸಿದ್ದು, ಹೀಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಜನತಾ ದರ್ಶನ ನಡೆಯುವ ದಿನ ಎಲ್ಲ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿರಬೇಕು ಎಂದು ರಜನೀಶ್ ಗೋಯಲ್ ಸೂಚಿಸಿದ್ದಾರೆ.