ಪ್ರಸ್ತುತ ವಿಧಾನ ಮಂಡಲದ ಉಭಯ ಸದನಗಳ ಕಲಾಪ ನಡೆಯುತ್ತಿದ್ದು, ಆಡಳಿತರೂಢ ಬಿಜೆಪಿ ಹಾಗೂ ಪ್ರತಿಪಕ್ಷಗಳ ನಡುವೆ ಆರೋಪ – ಪ್ರತ್ಯಾರೋಪಗಳು ಕೇಳಿ ಬರುತ್ತಿವೆ. ಇದರ ಮಧ್ಯೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆ ಒಂದು ಕುತೂಹಲ ಮೂಡಿಸಿದೆ.
ಸಾವಿರಾರು ಕೋಟಿ ರೂಪಾಯಿಗಳ ವ್ಯವಹಾರಕ್ಕೆ ಸಂಬಂಧಿಸಿದಂತೆ ದೊಡ್ಡ ಹಗರಣ ಒಂದು ನಡೆದಿದ್ದು, ಇದನ್ನು ಸದನದಲ್ಲಿ ಪ್ರಸ್ತಾಪ ಮಾಡಲು ಅವಕಾಶ ನೀಡುವಂತೆ ವಿಧಾನಸಭಾ ಅಧ್ಯಕ್ಷರಿಗೆ ಮನವಿ ಮಾಡಿದ್ದೇನೆ ಎಂದು ಸೋಮವಾರದಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ಸದನದಲ್ಲಿ ಸುಖಾಸುಮ್ಮನೆ ಮಾತನಾಡಿ ಇರುಸು ಮುರುಸು ಉಂಟು ಮಾಡಲು ನನಗಿಷ್ಟವಿಲ್ಲ ಎಂದು ಹೇಳಿದ ಕುಮಾರಸ್ವಾಮಿಯವರು, ತಮಗೆ ವಿಷಯ ಪ್ರಸ್ತಾಪಿಸಲು ಅವಕಾಶ ಮಾಡಿಕೊಡುವಂತೆ ದೂರವಾಣಿ ಮೂಲಕವೂ ವಿಧಾನಸಭಾ ಅಧ್ಯಕ್ಷರಿಗೆ ಮನವಿ ಮಾಡಿದ್ದೇನೆ. ಮಂಗಳವಾರದಂದು ಇದಕ್ಕೆ ಅವಕಾಶ ಸಿಗಬಹುದು ಎಂದು ತಿಳಿಸಿದ್ದಾರೆ.