ಮೈಸೂರು: ಸಾಹಸ ಸಿಂಹ, ನಟ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣದ ಕನಸು ಕೊನೆಗೂ ನನಸಾಗಿದೆ. ವಿಷ್ಣುವರ್ಧನ್ ಅವರ ಸ್ಮಾರಕವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಲೋಕಾರ್ಪಣೆ ಮಾಡಿದ್ದಾರೆ.
ಮೈಸೂರಿನ ಹಾಲಾಳು ಗ್ರಾಮದಲ್ಲಿ 5 ಎಕರೆ ಜಾಗದಲ್ಲಿ ನಿರ್ಮಾಣವಾಗಿರುವ ಡಾ. ವಿಷ್ಣುವರ್ಧನ್ ಅವರ ಸ್ಮಾರಕವನ್ನು ಸಿಎಂ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು. ಇದೇ ವೇಳೆ ವಿಷ್ಣುವರ್ಧನ್ ಅವರ 7 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣ ಮಾಡಲಾಯಿತು.
ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ಡಾ. ವಿಷ್ಣುವರ್ಧನ್ ಮೇರು ನಟ, ಹಲವು ಭಾಷೆಗಳಲ್ಲಿ ಅಭಿನಯಿಸಿದ ಬಹುಭಾಷಾ ನಟ. ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಹೀಗೆ ಎಲ್ಲಾ ವಿಧದ ಪಾತ್ರಗಳನ್ನು ಮಾಡುವ ಮೂಲಕ ಅಭಿಮಾನಿಗಳ ಸಾಹಸ ಸಿಂಹನಾಗಿದ್ದವರು ಎಂದರು.
11 ಕೋಟಿ ವೆಚ್ಚದಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಮಾಡಲಾಗಿದೆ. ವಿಷ್ಣುವರ್ಧನ್ ಸ್ಮಾರಕ ಪ್ರವಾಸಿ ತಾಣವಾಗಬೇಕು ಎಂದು ಹೇಳಿದರು.