ಹುಬ್ಬಳ್ಳಿ: ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ವಿಚಾರ ಚರ್ಚೆಯಲ್ಲಿದ್ದು, ಈ ಕುರಿತು ಸ್ಪಷ್ಟನೆ ನೀಡಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಿಎಂ ಬದಲಾವಣೆ ಕೇವಲ ಊಹಾಪೋಹ. ಇದು ಕಾಂಗ್ರೆಸ್ ನಾಯಕರ ಭ್ರಮೆ ಎಂದು ತಿರುಗೇಟು ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅರುಣ್ ಸಿಂಗ್, ಸಿಎಂ ಬಸವರಾಜ್ ಬೊಮ್ಮಾಯಿ ಬದಲಾವಣೆ ಕೇವಲ ವದಂತಿ. ಇದೆಲ್ಲವೂ ಕಾಂಗ್ರೆಸ್ ನಾಯಕರು ಮಾಡುತ್ತಿರುವ ಕುತಂತ್ರ. ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ಸಿಗರೇ ಹೆಚ್ಚು ತಲೆ ಕೆಡಿಸಿಕೊಂಡಂತಿದೆ. ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಬೊಮ್ಮಾಯಿ ಆಡಳಿತ ತೃಪ್ತಿಕರವಾಗಿದೆ. ತುಂಬಾ ಸರಳ, ಸಜ್ಜನಿಕೆಯ ವ್ಯಕ್ತಿ. ಉತ್ತಮವಾಗಿ ಆಡಳಿತ ನಡೆಸುತ್ತಿದ್ದಾರೆ ಎಂದರು.
ನೈಟ್ ಕರ್ಪ್ಯೂಗೆ ಬೆಂಗಳೂರು ಪೊಲೀಸ್ ಹಾಗೂ ಪಾಲಿಕೆ ಸಿದ್ಧತೆ
ರೈತರ ಮಕ್ಕಳಿಗೆ ಸ್ಕಾಲರ್ ಶಿಪ್ ನೀಡಲಾಗಿದೆ. ರೈತ ಮಕ್ಕಳ ಖಾತೆಗೆ ನೇರವಾಗಿ ಹಣ ವರ್ಗಾವಣೆ, ಬಡವರಿಗೆ ಮನೆ ನಿರ್ಮಾಣ, ಪ್ರವಾಹ ಪರಿಸ್ಥಿತಿ ಖುದ್ದು ನಿರ್ವಹಣೆ, ಪರಿಹಾರ ವಿತರಣೆ ಸೇರಿದಂತೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬದಲಾವಣೆ ಚರ್ಚೆಯೇ ಇಲ್ಲ ಎಂದು ಹೇಳಿದರು.
ಇದೇ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಅರುಣ್ ಸಿಂಗ್, ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಿಂದ ತುಂಬಿತ್ತು. ಅವರು ಅಪ್ಪಟ ಹಿಂದೂ ವಿರೋಧಿ. ಬಿಜೆಪಿ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡಿ ಕುತಂತ್ರ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.