ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ನಾಳೆ ದೊಡ್ಡಬಳ್ಳಾಪುರದಲ್ಲಿ ಸರ್ಕಾರದ ‘ಜನೋತ್ಸವ’ ಮೂಲಕ ಶಕ್ತಿ ಪ್ರದರ್ಶನ ನಡೆಸಲು ಮುಂದಾಗಿದ್ದು, ಇದರ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯ ಮೇಲಿನಪೇಟೆಯಲ್ಲಿ ನಡೆದಿರುವ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಪ್ರಕರಣ ಮುಳುವಾಗಿ ಪರಿಣಮಿಸುವ ಸಾಧ್ಯತೆ ಇದೆ.
ತಮ್ಮದೇ ಸರ್ಕಾರ, ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿದ್ದರೂ ಸಹ ಹಿಂದೂ ಸಂಘಟನೆಗಳ ಕಾರ್ಯಕರ್ತರು ಕೊಲೆಯಾಗುತ್ತಿರುವ ಹಿನ್ನೆಲೆಯಲ್ಲಿ ತಿರುಗಿ ಬಿದ್ದಿರುವ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳ ಮೂಲಕ, ಈ ಸಮಾವೇಶದಲ್ಲಿ ಹಾಜರಾಗಬೇಡಿ. ಒಂದೊಮ್ಮೆ ಹಾಜರಾದರೂ ಸಹ ಕಪ್ಪು ಪಟ್ಟಿ ಧರಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಎಂದು ಪ್ರಚಾರ ನಡೆಸಿದ್ದು, ಇದರಿಂದ ಸರ್ಕಾರ ಮುಜುಗರಕ್ಕೆ ಒಳಗಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈಗಾಗಲೇ ಈ ಹಿಂದೆ ನಡೆದಿರುವ ಹಿಂದೂ ಕಾರ್ಯಕರ್ತರ ಕೊಲೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಯಾವುದೇ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಸಮಾಧಾನಗೊಂಡಿರುವ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಇದಕ್ಕಾಗಿ ಅಭಿಯಾನವನ್ನೇ ನಡೆಸುತ್ತಿದ್ದಾರೆ. ಈ ಮೂಲಕವಾದರೂ ಬಿಜೆಪಿ ಉನ್ನತ ನಾಯಕರಿಗೆ ನಮ್ಮ ಅಳಲು ಮುಟ್ಟಲಿ ಎಂಬುದು ಅವರ ಆಶಯವಾಗಿದೆ.