ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ತಯಾರಿ ಹಾಗೂ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಆರ್.ಎಸ್.ಎಸ್. ಸಹಸಂಚಾಲಕ ಮುಕುಂದ್ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಬೊಮ್ಮಾಯಿ ನಿವಾಸಕ್ಕೆ ಇಂದು ಬೆಳಿಗ್ಗೆ ಭೇಟಿ ನೀಡಿರುವ ಆರ್.ಎಸ್.ಎಸ್ ನಾಯಕ ಮುಕುಂದ್ ಕೆಲ ಕಾಲ ಮಹತ್ವದ ಚರ್ಚೆ ನಡೆಸಿದ್ದಾರೆ.
ಗುಜರಾತ್ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಈ ಹಿಂದೆ ಸಿಎಂ ಬೊಮ್ಮಾಯಿ ಹೇಳಿದ್ದರು. ಇದೀಗ ಗುಜರಾತ್ ಚುನಾವಣೆ ಮುಗಿದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು ಇದೇ ಮಾದರಿಯ ಫಲಿತಾಂಶ ಕರ್ನಾಟಕದಲ್ಲಿಯೂ ಬರಬೇಕು ಎಂಬ ನಿರೀಕ್ಷೆಯಲ್ಲಿ ಬಿಜೆಪಿ ನಾಯಕರಿದ್ದಾರೆ. ಈ ಸಂದರ್ಭದಲ್ಲೇ ಆರ್.ಎಸ್. ಎಸ್ ಸಹಸಂಚಾಲಕರು ಇಂದು ಸಿಎಂ ಭೇಟಿಯಾಗಿ ಮಾತುಮತೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲದ ಜೊತೆಗೆ ಹೊಸ ಸಂಚಲನಕ್ಕೆ ಕಾರಣವಾಗುವ ಸಾಧ್ಯತೆ ದಟ್ಟವಾಗಿದೆ.