ಮುಂಬೈ: ಕೊರೊನಾ ಸಂದರ್ಭದಲ್ಲಿ ರಾಜ್ಯದ ಜನರಿಗೆ ಆಕ್ಸಿಜನ್ ನೀಡಲು ಪ್ರಧಾನಿ ಮೋದಿಗೆ ಸಾಧ್ಯವಾಗಲಿಲ್ಲ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಸಿದ್ದರಾಮಯ್ಯನವರಿಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ದೇಶದಲ್ಲಿ ಈ ಹಿಂದೆ ಮಲೇರಿಯಾ ಸೇರಿ ಹಲವು ರೋಗ ಹರಡಿದ್ದವು. ಆಗ ಅಂದಿನ ಕಾಂಗ್ರೆಸ್ ಸರ್ಕಾರ ಆಸ್ಪತ್ರೆಗಳಲ್ಲಿ ಆಕ್ಸಿಜನ್ ನೀಡಿರಲಿಲ್ಲ. ಜನರಿಗೆ ಯಾವುದೇ ಸೌಲಭ್ಯಗಳನ್ನು ಕೊಟ್ಟಿರಲಿಲ್ಲ. ಇಂದು ನಾವು ಆಸ್ಪತ್ರೆಗಳಿಗೆ ಮೂಲಸೌಕರ್ಯ ಕಲ್ಪಿಸಿದ್ದೇವೆ. ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಸಿದ್ದರಾಮಯ್ಯ ಅವರಿಗೆ ಇಲ್ಲ ಎಂದು ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ಸುಳ್ಳು ಹೇಳುವುದರಲ್ಲಿ ನಿಷ್ಣಾತರು. ಬಿಜೆಪಿಯನ್ನು ವಿರೋಧಿಸಬೇಕು ಎಂಬ ಕಾರಣಕ್ಕೆ ಇಲ್ಲ ಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕೊರೊನಾದಂತಹ ಸಂಕಷ್ಟದ ಸಂದರ್ಭವನ್ನು ಪ್ರಧಾನಿ ಮೋದಿ ನೇತೃತ್ವದಲ್ಲಿ ಇಡೀ ದೇಶ ಸಮರ್ಥವಾಗಿ ಎದುರಿಸಿದೆ ಎಂದು ಹೇಳಿದರು.