ಹುಬ್ಬಳ್ಳಿ: 2023ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಟಿಕೆಟ್ ಗಾಗಿ ಪೈಪೋಟಿ ನಡೆಸಿದ್ದಾರೆ. ಈ ನಡುವೆ ವಿಪಕ್ಷ ನಾಯಕ ಸಿದ್ದರಾಮಯ್ಯ ಚುನಾವಣೆಯಲ್ಲಿ ಸ್ಪರ್ಧಿಸದೇ ಇದ್ದರೆ ಸೂಕ್ತ ಎಂದು ಮಾಜಿ ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದ್ದು, ಭಾರಿ ಚರ್ಚೆಗೆ ಕಾರಣವಾಗಿದೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಸಂತೋಷ್ ಲಾಡ್, ಸಿದ್ದರಾಮಯ್ಯನವರು ರಾಜ್ಯ ಪ್ರವಾಸ ಮಾಡಲಿ, ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಲಿ. ಈಬಾರಿ ಚುನಾವಣೆಯಲ್ಲಿ ಅವರು ಸ್ಪರ್ಧಿಸದಿದ್ದರೆ ಸೂಕ್ತ ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದರು.
ಸಿದ್ದರಾಮಯ್ಯ ಈ ಬಾರಿ ಬಾದಾಮಿ ಬಿಟ್ಟು ಕೋಲಾರದಿಂದ ಸ್ಪರ್ಧೆಗೆ ಮುಂದಾಗಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಕನಕಪುರ ಕ್ಷೇತ್ರದ ಟಿಕೆಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಸಿದ್ದರಾಮಯ್ಯ ಈವರೆಗೆ ಟಿಕೆಟ್ ಗಾಗಿ ಇನ್ನೂ ಅರ್ಜಿ ಸಲ್ಲಿಸಿಲ್ಲ ಎನ್ನಲಾಗಿದೆ. ಈ ನಡುವೆ ಸಿದ್ದರಾಮಯ್ಯ ಅವರ ಆಪ್ತರೇ ಆಗಿರುವ ಸಂತೋಷ್ ಲಾಡ್ ನೀಡಿರುವ ಹೇಳಿಕೆ ಕಾಂಗ್ರೆಸ್ ನಲ್ಲಿಯೇ ಚರ್ಚೆ ಹುಟ್ಟುಹಾಕಿದೆ.