ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಗೆ ಕಾರಣರಾದ ಸಚಿವರ ಅಸಮಾಧಾನವನ್ನು ಶಮನ ಮಾಡುವ ನಿಟ್ಟಿನಲ್ಲಿ ಸಜಿವರ ಜವಾಬ್ದಾರಿಯಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದ್ದು, ಸಕ್ಕರೆ ಹಾಗೂ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಇದೇ ವೇಳೆ ಸಚಿವ ಸಿ.ಪಿ.ಯೋಗೇಶ್ವರ್ ಅವರಿಗೂ ಕೋಲಾರ ಜಿಲ್ಲಾ ಉಸ್ತುವಾರಿ ನೀಡಲು ಸಿಎಂ ಮುಂದಾಗಿದ್ದಾರೆ. ಈ ಬಗ್ಗೆ ಸ್ವತ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದು, ಕೋಲಾರ ಜಿಲ್ಲಾ ಉಸ್ತುವಾರಿ ಖಾಲಿಯಿದ್ದು, ಸಿ.ಪಿ.ಯೋಗೇಶ್ವರ್ ಅವರನ್ನು ಕೋಲಾರ ಜಿಲ್ಲಾ ಉಸ್ತುವಾರಿಯಾಗಿ ನೇಮಕ ಮಾಡಲು ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ.
ಇನ್ನು ಎಂಟಿಬಿ ನಾಗರಾಜ್ ಅವರಿಗೆ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ನೀಡಲಾಗಿದ್ದು, ಕಂದಾಯ ಸಚಿವ ಆರ್.ಅಶೋಕ್ ಅವರ ಅಪೇಕ್ಷೆಯಂತೆಯೇ ಎಂಟಿಬಿ ಅವರಿಗೆ ಉಸ್ತುವಾರಿ ಹೊಣೆಗಾರಿಕೆ ನೀಡಲಾಗಿದೆ. ಈ ಬಗ್ಗೆ ಅಶೋಕ್ ಅವರಿಗೆ ಯಾವುದೇ ಅಸಮಾಧಾನವೂ ಇಲ್ಲ ಎಂದು ಹೇಳಿದರು.