ಮಂಗಳೂರು: ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರವನ್ನು ಕೊನೆಗೂ ರದ್ದು ಪಡಿಸಲಾಗಿದೆ.
ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾಹಿತಿ ನೀಡಿದ್ದು, ಸುರತ್ಕಲ್ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ಕೇಂದ್ರ ಸರ್ಕಾರ ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ್ದಕ್ಕೆ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಎಂದು ತಿಳಿಸಿದ್ದಾರೆ.
ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಮಂಗಳೂರು ಬಳಿಯ ಸುರತ್ಕಲ್ ಟೋಲ್ ಸಂಗ್ರಹ ಕೇಂದ್ರ ರದ್ದು ಮಾಡುವಂತೆ ಆಗ್ರಹಿಸಿ ಸಾರ್ವಜನಿಕರು ಟೋಲ್ ಕೇಂದ್ರಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು. ಒತ್ತಡಕ್ಕೆ ಮಣಿದು ಸರ್ಕಾರ ಕೊನೆಗೂ ಸುರತ್ಕಲ್ ಟೋಲ್ ಕೇಂದ್ರವನ್ನು ತೆಗೆದು ಹಾಕಿದೆ.