ಬೆಂಗಳೂರು: ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣದ ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದು, ಆದರೆ ಜೈಲಿನಲ್ಲಿ ಆರೋಪಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಪೊಲೀಸರು ಸೆಲ್ ಮೇಲೆ ನಡೆಸಿದ ದಾಳಿ ವೇಳೆ ಆರೋಪಿಗಳ ಬಳಿ ಸಿಕ್ಕಿರುವ ಕೆಲ ಎಲೆಕ್ಟ್ರಾನಿಕ್ ಉಪಕರಣಗಳು ಈ ಅನುಮಾನಕ್ಕೆ ಪುಷ್ಠಿ ನೀಡುವಂತಿದೆ.
ಹರ್ಷನ ಕೊಲೆ ಆರೋಪಿಗಳಾದ ಖಾಸಿಫ್ ಹಾಗೂ ಆತನ ಗ್ಯಾಂಗ್ ನ್ನು ಇರಿಸಲಾಗಿರುವ ಪರಪ್ಪನ ಅಗ್ರಹಾರ ಜೈಲಿನ ಸೆಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಆರೋಪಿಗಳ ಬಳಿ ಮೊಬೈಲ್ ಫೋನ್, ಎಲೆಕ್ಟ್ರಾನಿಕ್ ಉಪಕರಣಗಳು ಪತ್ತೆಯಾಗಿವೆ.
ಆರೋಪಿಗಳು ಜೈಲಿನಲ್ಲಿದ್ದರೂ ಆಂಡ್ರಾಯ್ಡ್ ಫೋನ್ ಯೂಸ್ ಮಾಡುತ್ತಿದ್ದು, ಕುಟುಂಬದವರ ಜತೆ, ಸ್ನೇಹಿತರೊಂದಿಗೆ ವಿಡಿಯೋ ಕಾಲ್, ಚಾಟಿಂಗ್ ಮೂಲಕ ಆರಾಮವಾಗಿ ಕಾಲ ಕಳೆಯುತ್ತಿದ್ದಾರೆ. ಅಲ್ಲದೇ ಜೈಲಿನಿಂದಲೇ ಹಣಕ್ಕಾಗಿ ಕೆಲ ಡೀಲ್ ಮಾಡುತ್ತಿದ್ದಾರೆ ಎನ್ನಲಾಗಿದೆ.
ಜೈಲಿನಲ್ಲಿರುವ ಆರೋಪಿಗಳಿಗೆ ಮೊಬೈಲ್ ಫೋನ್ ಸಿಕ್ಕಿದ್ದಾದರೂ ಹೇಗೆ ಎಂಬುದು ತನಿಖೆಯಿಂದಷ್ಟೇ ತಿಳಿಯಬೇಕಿದೆ. ಆರೋಪಿಗಳಿಗೆ ಎಲೆಕ್ಟ್ರಾನಿಕ್ ಉಪಕರಣಗಳು ಸಿಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.