ಜೆಡಿಎಸ್ ನಾಯಕರಿಗೆ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರ ತಲೆ ನೋವಾಗಿ ಪರಿಣಮಿಸಿದ್ದು, ಈ ಕಾರಣಕ್ಕಾಗಿಯೇ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ವಿಳಂಬವಾಗಿದೆ. ಭವಾನಿ ರೇವಣ್ಣ ಹಾಗೂ ಸ್ವರೂಪ್ ಈ ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳಾಗಿದ್ದು, ಪತ್ನಿ ಪರ ರೇವಣ್ಣ ಲಾಬಿ ನಡೆಸುತ್ತಿದ್ದರೆ ಸ್ವರೂಪ್ ಪರವಾಗಿ ಕುಮಾರಸ್ವಾಮಿಯವರಿದ್ದಾರೆ.
ಶನಿವಾರದಂದು ಹಾಸನದ ಜೆಡಿಎಸ್ ಮುಖಂಡರುಗಳು ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡರನ್ನು ಭೇಟಿ ಮಾಡಿ ಭವಾನಿ ರೇವಣ್ಣ ಅವರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಇದರ ಮಧ್ಯೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಯಾವುದೇ ಒತ್ತಡಗಳಿಗೆ ಮಣಿಯುವ ಪ್ರಶ್ನೆಯೇ ಇಲ್ಲ. ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡುವುದು ಖಚಿತ ಎಂದು ಹೇಳಿದ್ದಾರೆ. ಈ ಮೂಲಕ ಸ್ವರೂಪ್ ಅವರಿಗೇ ಹಾಸನದ ಟಿಕೆಟ್ ನೀಡಲಾಗುವುದು ಎಂಬುದನ್ನು ಪರೋಕ್ಷವಾಗಿ ಹೇಳಿದ್ದಾರೆ.
ಆದರೆ ಎಚ್.ಡಿ. ರೇವಣ್ಣ, ಪತ್ನಿ ಭವಾನಿ ರೇವಣ್ಣ ಅವರಿಗೆ ಟಿಕೆಟ್ ಸಿಗದಿದ್ದರೂ ಪರವಾಗಿಲ್ಲ. ಯಾವುದೇ ಕಾರಣಕ್ಕೂ ಸ್ವರೂಪ್ ಗೆ ಟಿಕೆಟ್ ನೀಡಬಾರದು ಎಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಹೀಗಾಗಿ ದೇವೇಗೌಡರು ಇಂದು ಕುಮಾರಸ್ವಾಮಿ ಹಾಗೂ ರೇವಣ್ಣ ಇಬ್ಬರನ್ನು ತಮ್ಮ ನಿವಾಸಕ್ಕೆ ಕರೆಯಿಸಿಕೊಂಡು ಮಾತುಕತೆ ನಡೆಸಿ ಹಾಸನ ಟಿಕೆಟ್ ವಿಚಾರ ಅಂತಿಮಗೊಳಿಸಲಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಈ ವಿಚಾರಕ್ಕೆ ಇಂದು ತೆರೆ ಬೀಳುವ ಸಾಧ್ಯತೆ ಇದೆ.