ಹಾಸನ ವಿಧಾನಸಭಾ ಚುನಾವಣೆಯ ಟಿಕೆಟ್ ಹಂಚಿಕೆ ವಿಚಾರ ಜೆಡಿಎಸ್ ಪಕ್ಷಕ್ಕೆ ಕಗ್ಗಂಟಾಗಿ ಪರಿಣಮಿಸಿದ್ದು, ಇದೀಗ ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡರೇ ಈ ವಿಚಾರದಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಹಾಸನ ಕ್ಷೇತ್ರದ ಜೆಡಿಎಸ್ ಮುಖಂಡರನ್ನು ಇಂದು ತಮ್ಮ ನಿವಾಸಕ್ಕೆ ಕರೆಯಿಸಿಕೊಳ್ಳಲಿರುವ ದೇವೇಗೌಡರು ಅವರ ಜೊತೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.
ಹಾಸನ ವಿಧಾನಸಭಾ ಅಭ್ಯರ್ಥಿಯಾಗಲು ಮಾಜಿ ಸಚಿವ ಎಚ್.ಡಿ. ರೇವಣ್ಣನವರ ಪತ್ನಿ ಭವಾನಿ ರೇವಣ್ಣ ಹಾಗೂ ಮಾಜಿ ಶಾಸಕ ಪ್ರಕಾಶ್ ಅವರ ಪುತ್ರ ಸ್ವರೂಪ್ ಆಕಾಂಕ್ಷಿಗಳಾಗಿದ್ದು, ಪತ್ನಿ ಪರ ರೇವಣ್ಣ ಲಾಬಿ ನಡೆಸಿದರೆ, ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಸ್ವರೂಪ್ ಪರ ಒಲವು ಹೊಂದಿದ್ದಾರೆ. ಹೀಗಾಗಿ ಟಿಕೆಟ್ ಹಂಚಿಕೆ ವಿಚಾರ ಅಣ್ಣ-ತಮ್ಮಂದಿರಲ್ಲಿ ಪೈಪೋಟಿ ಏರ್ಪಟ್ಟಿದೆ.
ಈ ವಿಚಾರ ಕಾರ್ಯಕರ್ತರಲ್ಲೂ ಗೊಂದಲ ಉಂಟು ಮಾಡಿದ್ದು, ಈ ಹಿನ್ನಲೆಯಲ್ಲಿ ಸ್ವತಃ ತಾವೇ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ತೀರ್ಮಾನವನ್ನು ಕೈಗೊಳ್ಳಲು ದೇವೇಗೌಡರು ಮುಂದಾಗಿದ್ದಾರೆ. ಹೀಗಾಗಿ ಹಾಸನ ಮುಖಂಡರ ಜೊತೆ ಮಾತುಕತೆ ನಡೆಸಲಿದ್ದು, ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಬಹುತೇಕ ಹಿಂದೆ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಲಿದ್ದು, ಹಾಸನ ಅಭ್ಯರ್ಥಿಯ ಹೆಸರು ಕೂಡ ಫೈನಲ್ ಅಗಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.