alex Certify BIG NEWS: ಹಿಂದಿ ಹೇರಿಕೆ ವಿರುದ್ಧ ಸಿದ್ದರಾಮಯ್ಯ ಆಕ್ರೋಶ; ರಾಜ್ಯ ಭಾಷೆಗಳನ್ನು ದಮನಿಸುವ ಪ್ರಯತ್ನ ಎಂದು ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿಂದಿ ಹೇರಿಕೆ ವಿರುದ್ಧ ಸಿದ್ದರಾಮಯ್ಯ ಆಕ್ರೋಶ; ರಾಜ್ಯ ಭಾಷೆಗಳನ್ನು ದಮನಿಸುವ ಪ್ರಯತ್ನ ಎಂದು ಕಿಡಿ

ಬೆಂಗಳೂರು: ರಾಜ್ಯಗಳು ಪರಸ್ಪರ ಸಂಪರ್ಕ ಭಾಷೆಯಾಗಿ ಹಿಂದಿಯನ್ನು‌ ಬಳಸಬೇಕೆಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಫರ್ಮಾನು ಹೊರಡಿಸಿರುವುದು ಅತ್ಯಂತ‌ ಆಕ್ಷೇಪಾರ್ಹ ನಡವಳಿಕೆಯಾಗಿದೆ. ಒಬ್ಬ ಸ್ವಾಭಿಮಾನಿ‌ ಕನ್ನಡಿಗನಾಗಿ‌ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಹಿಂದಿ, ಇಂಗ್ಲೀಷ್, ತಮಿಳು,‌ ಮಲೆಯಾಳಿ, ಗುಜರಾತಿ ಸೇರಿದಂತೆ ಯಾವ ಭಾಷೆಗೂ ನಾವು ವಿರೋಧಿಗಳಲ್ಲ. ಆದರೆ ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಸ್ಥಾನ. ಯಾವುದೇ ಒಂದು ಭಾಷೆಯನ್ನು ಹೇರಲು ಹೊರಟರೆ ಸಹಿಸಲು ಸಾಧ್ಯ ಇಲ್ಲ ಎಂದು ಸರಣಿ ಟ್ವೀಟ್ ಮೂಲಕ ಗುಡುಗಿದ್ದಾರೆ.

ನಮ್ಮ ಭಾಷಾ ನಿಲುವು ಮತ್ತು ದೇಶ-ರಾಜ್ಯಗಳ ಸಂಬಂಧವನ್ನು ರಾಷ್ಟ್ರಕವಿ‌ ಕುವೆಂಪು ಅವರು ದಶಕಗಳ ಹಿಂದೆಯೇ ಸ್ಪಷ್ಟವಾಗಿ ವ್ಯಾಖ್ಯಾನಿಸಿದ್ದಾರೆ. “ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ’ ಎನ್ನುವ ಕವಿ ನುಡಿಯೇ ನಮ್ಮ ಭಾಷಾ ಸಿದ್ಧಾಂತ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದ ಹಿಂದಿಯನ್ನು ರಾಷ್ಟ್ರಭಾಷೆ ಎನ್ನುವ ರೀತಿಯಲ್ಲಿ ಬಿಂಬಿಸುವ ಜೊತೆಯಲ್ಲಿ, ರಾಜ್ಯ ಭಾಷೆಗಳನ್ನು ದಮನಿಸುವ ಪ್ರಯತ್ನ ನಡೆಯುತ್ತಲೇ ಇದೆ. ಇದನ್ನು ಹಿಂದಿಯೇತರ ಭಾಷೆಗಳನ್ನಾಡುವ ರಾಜ್ಯಗಳು ಕೂಡಿ ಪ್ರತಿಭಟಿಸುವ ಕಾಲ ಸನ್ನಿಹಿತವಾಗಿದೆ ಎಂದಿದ್ದಾರೆ.

ಸರ್ಕಾರದ ಪಾಪದ ಕೊಡ ತುಂಬಿದೆ; ಜಾಣಮೌನ ಎಲ್ಲದಕ್ಕೂ ಪ್ರೋತ್ಸಾಹ ಕೊಡುತ್ತದೆ: ಮತ್ತೆ ಕಿಡಿಕಾರಿದ ಕುಮಾರಸ್ವಾಮಿ

ಗುಜರಾತಿನಿಂದ ಬಂದಿರುವ ಅಮಿತ್ ಶಾ ಅವರ ಮಾತೃಭಾಷೆ ಗುಜರಾತಿ. ಇವರು ತಮ್ಮ ಮಾತೃಭಾಷೆಯನ್ನೇ ಕಡೆಗಣಿಸಿ ಹಿಂದಿ ಭಾಷೆಯ ಗುಲಾಮಗಿರಿ‌ ಮಾಡುತ್ತಿರುವುದು ವಿಷಾದನೀಯ. ಅಮಿತ್ ಶಾ ಅವರ ತವರು ಗುಜರಾತ್ ರಾಜ್ಯದ ಮಣ್ಣಿನ‌ ಮಗನಾದ ಮಹಾತ್ಮ ಗಾಂಧೀಜಿ ಬಹು ಸಂಸ್ಕೃತಿ, ಬಹುಭಾಷೆಗಳ ಪ್ರತಿಪಾದಕರಾಗಿದ್ದರು. ಆದರೆ ಅಮಿತ್ ಶಾ ಅವರಿಗೆ ಗಾಂಧೀಜಿಯವರಿಗಿಂತ ಏಕ ಸಂಸ್ಕೃತಿ, ಏಕಭಾಷೆಯ ಪ್ರತಿಪಾದಕರಾದ ಸೂಡೊ ರಾಷ್ಟ್ರೀಯವಾದಿ ಸಾವರ್ಕರ್ ಪ್ರಿಯರಾಗಿರುವುದು ದುರಂತ.

ತಮಿಳುನಾಡು, ಕೇರಳ,‌ ಆಂಧ್ರಪ್ರದೇಶ, ಒಡಿಸ್ಸಾ, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳು ಸೇರಿದಂತೆ ದೇಶದ ಬಹುತೇಕ ರಾಜ್ಯಗಳು ಹಿಂದಿಯನ್ನು ಅಧಿಕೃತ ಸಂಪರ್ಕ ಭಾಷೆಯಾಗಿ ಬಳಸುವುದಿಲ್ಲ. ಅವುಗಳ ಜೊತೆಯಲ್ಲಿ ಹಿಂದಿಯಲ್ಲಿ ವ್ಯವಹರಿಸಬೇಕೆನ್ನುವುದು ಸಾಂಸ್ಕೃತಿಕ ಭಯೋತ್ಪಾದನೆಯಾಗಿದೆ. ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಹೇಳಿಕೆ ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವಿರುದ್ಧವಾಗಿರುವುದು ಮಾತ್ರವಲ್ಲ, ಮಾತೃಭಾಷೆಗಳಿಗೆ ಮಾಡಿರುವ ಅವಮಾನವಾಗಿದೆ. ಅನಗತ್ಯ ಘರ್ಷಣೆಗೆ ಎಡೆಮಾಡಿಕೊಡುವ ಈ ಬೇಜವಾಬ್ದಾರಿ ಹೇಳಿಕೆಯನ್ನು ಅಮಿತ್ ಶಾ ಅವರು ತಕ್ಷಣ ಹಿಂದೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...