ಉಡುಪಿ ಕಾಲೇಜಿನಲ್ಲಿ ಆರಂಭವಾದ ಹಿಜಾಬ್ – ಕೇಸರಿ ಶಾಲು ವಿವಾದ ಈಗ ರಾಜ್ಯದ ವಿವಿಧ ಜಿಲ್ಲೆಗಳಿಗೂ ಹಬ್ಬಿದೆ. ಅಲ್ಲದೇ ಹಿಜಾಬ್ ಧರಿಸಿ ತರಗತಿಗೆ ಹಾಜರಾಗುವ ವಿಷಯ ಈಗ ನ್ಯಾಯಾಲಯದ ಮೆಟ್ಟಿಲನ್ನೂ ಏರಿದೆ.
ಇದರ ಮಧ್ಯೆ ಕುಂದಾಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಎಸ್.ಡಿ.ಎಂ.ಸಿ. ಸಮಿತಿ ಸದಸ್ಯರು ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದಾರೆ. ವಿದ್ಯಾರ್ಥಿಗಳು ಹಿಜಾಬ್ ಅಥವಾ ಕೇಸರಿ ಶಾಲು ಧರಿಸಿ ಕಾಲೇಜಿನವರೆಗೂ ಬರಬಹುದು. ಆದರೆ ತರಗತಿ ಪ್ರವೇಶಿಸುವಾಗ ಮಾತ್ರ ಹಿಜಾಬ್ ಅಥವಾ ಕೇಸರಿ ಶಾಲಿಗೆ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.
ಆದರೆ ವಿದ್ಯಾರ್ಥಿನಿಯರು ಮಾತ್ರ ಹಿಜಾಬ್ ಧರಿಸಿಯೇ ತರಗತಿಗೆ ಹಾಜರಾಗುವುದಾಗಿ ಪಟ್ಟು ಹಿಡಿದಿದ್ದಾರೆ. ಇದಕ್ಕೆ ಪ್ರತಿಯಾಗಿ ಹಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದಾರೆ. ಇದರ ಮಧ್ಯೆ ಸರ್ಕಾರ ವಸ್ತ್ರ ಸಂಹಿತೆಯನ್ನು ಎಲ್ಲ ವಿದ್ಯಾರ್ಥಿಗಳು ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶಿಸಿದೆ.