ಮಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ 6 ವಿದ್ಯಾರ್ಥಿನಿಯರ ಫೋನ್ ನಂಬರ್ ನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಲಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿನಿಯರ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.
ರಾಜ್ಯದಲ್ಲಿ ಹಿಜಾಬ್ ವಿವಾದಕ್ಕೆ ಕಾರಣರಾಗಿದ್ದಾರೆ ಎಂದು ಹೇಳಲಾಗುತ್ತಿರುವ ಉಡುಪಿ ಪದವಿ ಪೂರ್ವ ಸರ್ಕಾರಿ ಕಾಲೇಜಿನ 6 ಯುವತಿಯರ ಪೋಷಕರು ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಹಿಜಾಬ್ ಧರಿಸುವ ಹಕ್ಕಿಗಾಗಿ ಪ್ರತಿಭಟನೆ ನಡೆಸಿದ್ದ 6 ವಿದ್ಯಾರ್ಥಿನಿಯರ ಪೋಷಕರು, ತಮ್ಮ ಮಕ್ಕಳ ಮೊಬೈಲ್ ಸಂಖ್ಯೆ ಹಾಗೂ ವೈಯಕ್ತಿಕ ವಿವರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಹಂಚಿಕೊಳ್ಳುತ್ತಿದ್ದಾರೆ. ಇಂತವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿದ್ಯಾರ್ಥಿನಿಯರ ಪೋಷಕರು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ವಿಷ್ಣುವರ್ಧನ್ ಅವರಿಗೆ ದೂರು ನೀಡಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಮಕ್ಕಳ ಮೊಬೈಲ್ ಸಂಖ್ಯೆಗಳನ್ನು ಕೆಲವರು ಶೇರ್ ಮಾಡಿರುವುದರಿಂದ ತಮ್ಮ ಮಕ್ಕಳಿಗೆ ಹಾಗೂ ತಮಗೆ ಬೆದರಿಕೆಯೊಡ್ಡುವ ಸಾಧ್ಯತೆ ಕೂಡ ಇದ್ದು, ರಕ್ಷಣೆ ನೀಡುವಂತೆಯೂ ಮನವಿ ಮಾಡಿದ್ದಾರೆ ಎಂದು ಎಸ್.ಪಿ.ವಿಷ್ಣುವರ್ಧನ್ ತಿಳಿಸಿದ್ದಾರೆ.