ಹುಬ್ಬಳ್ಳಿ: ಜೂನ್ 20ರಂದು ಹುಬ್ಬಳ್ಳಿ-ಧಾರವಾಡ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರ ಹಿಡಿಯಲು ಕಾಂಗ್ರೆಸ್ ರಣತಂತ್ರ ರೂಪಿಸಿದೆ. ಈಗಾಗಲೇ ಮಹಾನಗರ ಪಾಲಿಕೆ ಗದ್ದುಗೆ ಹಿಡಿಯಲು ತಂತ್ರ ಹೆಣೆದಿರುವ ಬಿಜೆಪಿ ರೆಸಾರ್ಟ್ ರಾಜಕಾರಣ ಆರಂಭಿಸಿರುವ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಕೈ ನಾಯಕರಿಗೆ ಟಾಸ್ಕ್ ನೀಡಿದೆ.
ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸಂತೋಷ್ ಲಾಡ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ನಾಯಕರು ಸರಣಿ ಸಭೆ ನಡೆಸಿದ್ದಾರೆ. ಈಬಾರಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕೈ ವಶವಾಗಲೇಬೇಕು ಎಂಬ ನಿಟ್ಟಿನಲ್ಲಿ ರಣತಂತ್ರ ರೂಪಿಸುತ್ತಿದ್ದಾರೆ.
ಸಂತೋಷ್ ಲಾಡ್ ನೇತೃತ್ವದಲ್ಲಿ ನಡೆದಿರುವ ಸಭೆಯಲ್ಲಿ ಮಾಜಿ ಸಿಎಮ್ ಜಗದೀಶ್ ಶೆಟ್ಟರ್, ವಿನಯ್ ಕುಲಕರಣಿ, ಪ್ರಸಾದ್ ಅಬ್ಬಯ್ಯ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದಾರೆ.