
ಹುಬ್ಬಳ್ಳಿ: ಈ ಬಾರಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಬಾವುಟ ಹಾರಲಿದೆ. ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬಹಳಷ್ಟು ಪಾಲಿಕೆ ಸದಸ್ಯರು ನಮ್ಮ ಕಡೆ ಒಲವು ತೋರಿದ್ದಾರೆ. ಪಕ್ಷೇತರ ಸದಸ್ಯರು ಹಾಗೂ ಕೆಲ ಬಿಜೆಪಿ ಸದಸ್ಯರಿಗೆ ಅಸಮಾಧಾನಗಳಿವೆ. ಹಾಗಾಗಿ ಅವರು ನಮ್ಮ ಕಡೆ ಒಲವು ತೋರುತ್ತಿದ್ದಾರೆ ಎಂದು ಹೇಳಿದರು.
ಕೆಲವರು ಕಾಂಗ್ರೆಸ್ ಸೇರಲು ನಮ್ಮ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್, ವಿನಯ್ ಕುಲ್ಕರಣಿ ಜೊತೆ ಚರ್ಚೆ ನಡೆಸಿದ್ದಾರೆ. ಬಿಜೆಪಿಯಲ್ಲಿ ಒಗ್ಗಟ್ಟಿಲ್ಲದ ಕಾರಣ ರೆಸಾರ್ಟ್ ರಾಜಕಾರಣ ಮಾಡುತ್ತಿದ್ದಾರೆ. ಈ ಬಾರಿ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಗದ್ದುಗೆ ಏರಲಿದೆ ಎಂದು ಹೇಳಿದರು.