ಬೆಂಗಳೂರು: ವಿಪಕ್ಷ ನಾಯಕರ ಸಭೆಗೆ ಅಧಿಕಾರಿಗಳ ದುರುಪಯೋಗ ಎಂಬ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆರೋಪಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ನಾವು ಯಾವ ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಂಡಿಲ್ಲ. ಸರ್ಕಾರದಿಂದ ಅಧಿಕಾರಿಗಳ ದುರ್ಬಳಕೆಯಾಗಿಲ್ಲ. ಶಿಷ್ಟಾಚಾರದ ಪ್ರಕಾರ ಅಧಿಕಾರಿಗಳನ್ನು ನಡೆಸಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ಕುಮಾರಣ್ಣ ಮಾತಾಡ್ತಾರೆ, ಅವರಿಗೂ ಸುದ್ದಿ ಬೇಕಲ್ವಾ? ಹಾಗಾಗಿ ಅನಗತ್ಯ ಆರೋಪ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ತಿರುಗೇಟು ನೀಡಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಘಟಬಂಧನಕ್ಕೆ ಬಂದ ಹೊರ ರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳುಹಿಸಿದ ಕಾಂಗ್ರೆಸ್ ಸರ್ಕಾರದ ನಡೆ ತಪ್ಪು. ನುಡುದಂತೆ ನಡೆಯುವುದು ಎಂದರೆ ಇದೇನಾ? ಎಂದು ಸರಣಿ ಟ್ವೀಟ್ ಮೂಲಕ ಹೆಚ್.ಡಿ.ಕುಮರಸ್ವಾಮಿ ಪ್ರಶ್ನಿಸಿದ್ದರು.
ಅಲ್ಲದೇ ಸತ್ಯಯುಗದಲ್ಲಿ ಹಿರಣ್ಯಕಶಿಪುವು ಅಷ್ಟದಿಕ್ಪಾಲಕರನ್ನು ಸೆರೆಹಿಡಿದು ಮೆಟ್ಟಿಲು ಮಾಡಿಕೊಂಡ ಪಾಪಕ್ಕೆ ಸರ್ವನಾಶವಾದ. ಕಾಂಗ್ರೆಸ್ ಕೂಡ 30 ಐಎಎಸ್ ಅಧಿಕಾರಿಗಳನ್ನು ರಾಜಕಾರಣಿಗಳ ದ್ವಾರಪಾಲಕರನ್ನಾಗಿ ಮಾಡುವ ಮೂಲಕ ತನ್ನ ನಾಶಕ್ಕೆ ತಾನೇ ನಾಂದಿ ಹಾಡಿದೆ ಎಂದು ಕಿಡಿಕಾರಿದ್ದರು.