ಬಾದಾಮಿ: ಬಿಜೆಪಿ ಹಾಗೂ ಜೆಡಿಎಸ್ ನ ಹಲವು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ಬಾದಾಮಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ, ಜೆಡಿಎಸ್ ನ ಶಾಸಕರು ನಮ್ಮ ಸಂಪರ್ಕದಲ್ಲಿರುವುದು ನಿಜ. ಆದರೆ ಎಷ್ಟು ಜನ ಇದ್ದಾರೆ, ಯಾರ್ಯಾರು ಇದ್ದಾರೆ ಎಂದು ನಾನು ಹೆಸರು ಹೇಳಲ್ಲ ಎಂದಿದ್ದಾರೆ.
ಇದೇ ವೇಳೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಹೆಚ್ ಡಿ ಕೆಗೆ ಯಾವಾಗ ಕೋಪ ಬರುತ್ತೋ ಯಾವಾಗ ಬಿಡುತ್ತೋ ಗೊತ್ತಿಲ್ಲ, ನನಗಂತು ಕೋಪ ಬರಲ್ಲ. ಪ್ರಜಾಪ್ರಭುತ್ವದಲ್ಲಿ ಟೀಕೆಗಳನ್ನು ಸಹಿಸಿಕೊಳ್ಳುವ ಶಕ್ತಿ ಇರಬೇಕು. ಸಹಿಸಿಕೊಳ್ಳುವವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುತ್ತೆ ಎಂದು ಹೇಳಿದ್ದಾರೆ.
ನಿನ್ನೆಯಷ್ಟೇ ಸುದ್ದಿಗೋಷ್ಠಿ ನಡೆಸಿದ್ದ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಜೆಡಿಎಸ್ ನ 15 ನಾಯಕರು ಕಾಂಗ್ರೆಸ್ ಗೆ ಬರಲು ಸಿದ್ದರಾಗಿದ್ದಾರೆ ಎಂದಿದ್ದರು ಇದರ ಬೆನ್ನಲ್ಲೇ ಇದೀಗ ಸಿದ್ದರಾಮಯ್ಯ ಬಿಜೆಪಿ, ಜೆಡಿಎಸ್ ನ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳಿರುವುದು ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸಂಚಲನಕ್ಕೆ ಕಾರಣವಾಗಿದೆ.