ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯದಲ್ಲಿ ಕ್ರೀಡಾಪಟುಗಳಿಗೆ ಉತ್ತಮ ಗುಣಮಟ್ಟದ ತರಬೇತಿ ಸಿಗಬೇಕು ಎಂಬ ಉದ್ದೇಶದಿಂದ 176 ಕೋಚ್ ಹುದ್ದೆಗಳನ್ನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ತಾಲೂಕು ಮಟ್ಟದಲ್ಲೂ ನೇಮಕಾತಿ ನಡೆಯಲಿದೆ.
ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಈ ವಿಷಯ ತಿಳಿಸಿದ್ದು, ಈ ಮೊದಲು ಪ್ರತಿ ತಾಲೂಕಿಗೆ ಒಬ್ಬರಂತೆ ಇನ್ನೂರ ಮೂವತ್ತೈದು ಕೋಚ್ ಹುದ್ದೆಗಳ ಮಂಜೂರಾತಿಗೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು ಎಂದಿದ್ದಾರೆ.
ಆದರೆ ಹಲವು ಸುತ್ತಿನ ಸಭೆ, ಚರ್ಚೆಗಳ ಬಳಿಕ ಆರ್ಥಿಕ ಇಲಾಖೆ ಹಳೆ ತಾಲೂಕುಗಳನ್ನು ಪರಿಗಣಿಸಿ 176 ಕೋಚ್ ಹುದ್ದೆಗಳನ್ನು ಮಂಜೂರು ಮಾಡಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ.