ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸದಲ್ಲಿ ಕೈನಾಯಕರ ಸಭೆ ನಡೆದಿದೆ.
ಮೂರು ಹಂತಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ತೀರ್ಮಾನ ಕೈಗೊಳ್ಳಲಾಗಿದ್ದು, ಮಾರ್ಚ್ ಮೊದಲ ವಾರದಲ್ಲಿ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು. ನಾಯಕರು ದೆಹಲಿಗೆ ತೆರಳುವ ಮುನ್ನ ನಡೆದ ಈ ಸಭೆ ಮಹತ್ವ ಪಡೆದುಕೊಂಡಿದೆ.
ಯಾವುದೇ ಗೊಂದಲವಿಲ್ಲದ 140-150 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿ ಮಾರ್ಚ್ ಮೊದಲ ವಾರದಲ್ಲಿ ಬಿಡುಗಡೆ ಮಾಡುವ ಬಗ್ಗೆ ಚರ್ಚೆಯಾಗಿದೆ. 30-20 ಅಭ್ಯರ್ಥಿಗಳಿಗೆ ಎರಡನೇ ಪಟ್ಟಿಯಲ್ಲಿ ಟಿಕೆಟ್ ಘೋಷಣೆ ಮಾಡಲಾಗುತ್ತಿದೆ. ಬಹಳಷ್ಟು ಗೊಂದಲ ಸೋಲುವ ಭೀತಿಯಿರುವ ಕ್ಷೇತ್ರಗಳಿಗೆ 3ನೇ ಪಟ್ಟಿಯಲ್ಲಿ ಅಭ್ಯರ್ಥಿಗಳನ್ನು ಘೋಷಿಸಲು ಚಿಂತನೆ ನಡೆಸಲಾಗಿದೆ. ಫೆ. 27ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಅಂತಿಮ ಸುತ್ತಿನ ಸಭೆ ನಡೆಯಲಿದ್ದು, ಫೆ.24ರಂದೇ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ್ ದೆಹಲಿಗೆ ತೆರಳಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.