ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ಪ್ರಕರಣ ಖಂಡಿಸಿ ಗೃಹ ಸಚಿವ ಅರಗ ಜ್ಞಾನೇಂದ್ರ ನಿವಾಸಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅಲ್ಲದೇ ಅವರ ವಿರುದ್ಧ ಜೆ.ಸಿ.ನಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿತ್ತು. ಇದೀಗ ಕಾರ್ಯಕರ್ತರನ್ನು ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ.
ಬೆಂಗಳೂರಿನ ಜಯಮಹಲ್ ನಲ್ಲಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಸರ್ಕಾರಿ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಕರಣ ಸಂಬಂಧ ಎಬಿವಿಪಿಯ ಓರ್ವ ಮಹಿಳಾ ಕಾರ್ಯಕರ್ತೆ ಸೇರಿದಂತೆ 30 ಕಾರ್ಯಕರ್ತರ ವಶಕ್ಕೆ ಪಡೆಯಲಾಗಿತ್ತು.
ಐಪಿಸಿ ಸೆಕ್ಷನ್ 448, 143, 147, 149ರ ಅಡಿಯಲ್ಲಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿತ್ತು. ವಶಕ್ಕೆ ಪಡೆದಿದ್ದ ಎಬಿವಿಪಿ ಕಾರ್ಯಕರ್ತರ ತೀವ್ರ ವಿಚಾರಣೆ ಬಳಿಕ ಸ್ಟೇಷನ್ ಬೇಲ್ ಮೇಲೆ 30 ಕಾರ್ಯಕರ್ತರನ್ನು ಬಿಡುಗಡೆಗೊಳಿಸಲಾಗಿದೆ ಎಂದು ತಿಳಿದುಬಂದಿದೆ.