ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಆತಂಕದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿನಿತ್ಯ 5,000 ಆರ್ ಟಿಪಿಸಿಆರ್ ಟೆಸ್ಟ್ ಗುರಿ ನಿಗದಿಪಡಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ವಿಕಾಸಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ರೂಪಾಂತರಿ ತಳಿ ಜೆ.ಎನ್.1 ರಾಜ್ಯದಲ್ಲಿ ಪತ್ತೆಯಾಗಿಲ್ಲ ಎಂಬುದನ್ನು ಆರೋಗ್ಯ ಅಧಿಕಾರಿಗಳು ಸ್ಪಷ್ಟಪಡಿಸಿದರು. ರಾಜ್ಯದ ಜನತೆ ಈ ಬಗ್ಗೆ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲವಾದರೂ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಟೆಸ್ಟ್’ಗಳನ್ನು ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
ಕೋವಿಡ್ ಹೊಸ ತಳಿಯ ಯಾವುದೇ ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿಲ್ಲ. ಕೇರಳದಲ್ಲಿ ದೃಢಪಟ್ಟಿರುವ ಈ ಕೋವಿಡ್ ಹೊಸ ತಳಿಯ ವೈರಾಣು ಹೆಚ್ಚು ಆತಂಕಕಾರಿಯಾಗಿಲ್ಲ ಎಂದು ತಿಳಿದುಬಂದಿದೆ. ಆದ್ದರಿಂದ ಜನತೆ ಯಾವುದೇ ರೀತಿಯ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಆದಾಗ್ಯೂ ರಾಜ್ಯಾದ್ಯಂತ ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟವರು ಹಾಗು ಬೇರೆ ಇನ್ನಾವುದೇ ರೋಗಗಳಿಂದ ಬಳಲುತ್ತಿರುವವರು ತಮ್ಮ ಆರೋಗ್ಯದ ಕುರಿತು ಹೆಚ್ಚಿನ ಮುಂಜಾಗ್ರತೆ ವಹಿಸಬೇಕೆಂದು ಮನವಿ ಮಾಡಿದ್ದಾರೆ.