ನವದೆಹಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣಾ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಕಾಂಗ್ರೆಸ್ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ.
ನವದೆಹಲಿಯ ಎಐಸಿಸಿ ಪಕ್ಷದ ಕಚೇರಿಯಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ಅವರ ಏಜೆಂಟರ ಸಮ್ಮುಖದಲ್ಲಿ ಮತ ಎಣಿಕೆ ಆರಂಭವಾಗಿದೆ. ಮಧ್ಯಾಹ್ನ 3 ಗಂಟೆ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ.
ಕಾಂಗ್ರೆಸ್ ಹಿರಿಯ ನಾಯಕರಾಗಿರುವ ಮಲ್ಲಿಕಾರ್ಜುನ್ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಜಯಗಳಿಸುವ ಸಾಧ್ಯತೆ ದಟ್ಟವಾಗಿದೆ ಎಂದು ವಿಶ್ಲೇಷಿಸಲಾಗಿದೆ. ಕಾಂಗ್ರೆಸ್ ಪಕ್ಷಕ್ಕೆ 137 ವರ್ಷಗಳ ಇತಿಹಾಸದಲ್ಲಿ ಇದು ಕೇವಲ 6 ನೇ ಬಾರಿ ನಡೆಯುತ್ತಿರುವ ಅಧ್ಯಕ್ಷ ಸ್ಥಾನದ ಚುನಾವಣೆಯಾಗಿದೆ. ಈ ಬಾರಿ ಗಾಂಧಿ ಕುಟುಂಬದ ಹೊರತಾದವರು ಅಧ್ಯಕ್ಷರಾಗಿ ಆಯ್ಕೆಯಾಗಲಿದ್ದಾರೆ.
1998ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಅವರು ಜಿತೇಂದ್ರ ಪ್ರಸಾದ್ ಅವರನ್ನು ಸೋಲಿಸಿ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. 2017 ಡಿಸೆಂಬರ್ ನಲ್ಲಿ ರಾಹುಲ್ ಗಾಂಧಿಗೆ ಸೋನಿಯಾ ಗಾಂಧಿ ಅಧ್ಯಕ್ಷ ಸ್ಥಾನ ಬಿಟ್ಟುಕೊಟ್ಟಿದ್ದರು. ಆದರೆ 2019ರಲ್ಲಿ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದರು. ಅಂದಿನಿಂದ ಸೋನಿಯಾ ಗಾಂಧಿಯವರೇ ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಇಂದು ಫಲಿತಾಂಶ ಹೊರಬೀಳಲಿದೆ.