ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ವದ ಸ್ಥಾನ ನೀಡಲಾಗಿದ್ದು, ಚುನಾವಣೆ ಜವಾಬ್ದಾರಿಯನ್ನು ಯಡಿಯೂರಪ್ಪ ಹೆಗಲಿಗೆ ವಹಿಸಲಾಗಿದೆ.
ಯಡಿಯೂರಪ್ಪನವರಿಗೆ ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿಎಸ್ ವೈ ಅವರನ್ನು ಭೇಟಿಯಾದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಿಎಸ್ ವೈ ಅವರಿಗೆ ಅಭಿನಂದನೆ ಸಲ್ಲಿಸಿದರು.
ಬಿಎಸ್ ವೈ ಅವರ ಕಾವೇರಿ ನಿವಾಸದಲ್ಲಿ ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅರುಣ್ ಸಿಂಗ್, ಯಡಿಯೂರಪ್ಪ ನಾಲ್ಕು ಬಾರಿ ಮುಖ್ಯಮಂತ್ರಿಯಾದವರು. 3 ಬಾರಿ ವಿಪಕ್ಷ ನಾಯಕರಾಗಿದ್ದವರು. ಈಗ ಪಕ್ಷದ ಉನ್ನತ ಮಟ್ಟದ ಸಮಿತಿ ಸದಸ್ಯರಾಗಿದ್ದಾರೆ. ಪಕ್ಷಕ್ಕೆ ದೊಡ್ಡ ಮಟ್ಟದ ಶಕ್ತಿ ಹಾಗೂ ಲಾಭವಾಗಿದೆ. ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ಸಿದ್ದರಾಮೋತ್ಸಕ್ಕೆ ಪರ್ಯಾಯವಾಗಿ ಜನೋತ್ಸವ ಕಾರ್ಯಕ್ರಮ ಎಂಬ ಚರ್ಚೆ ವಿಚಾರವಾಗಿ ಮಾತನಾಡಿದ ಅರುಣ್ ಸಿಂಗ್, ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಯಶಸ್ವಿ ಒಂದು ವರ್ಷ ಆಡಳಿತ ಪೂರೈಸಿರುವ ಹಿನ್ನೆಲೆಯಲ್ಲಿ ನಾವು ಜನರಿಗಾಗಿ ಉತ್ಸವ ಮಾಡುತ್ತಿದ್ದೇವೆ ಎಂದು ಹೇಳಿದರು.