ಬೆಂಗಳೂರು: ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಸಿಬಿಐ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಡಿ,ಕೆ. ಶಿವಕುಮಾರ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಹೆಚ್ಚುವರಿ ಕಾಲಾವಕಾಶ ನೀಡುವಂತೆ ಸಿಬಿಐ ಹೈಕೋರ್ಟ್ ಗೆ ಮನವಿ ಮಾಡಿದೆ. ಈ ವೇಳೆ ತನಿಖೆ ಪೂರ್ಣಗೊಂಡು ಆರೋಪ ಪಟ್ಟಿ ದಾಖಲಿಸಲಾಗಿದೆಯೇ ಎಂದು ಸಿಬಿಐ ಪರ ವಕೀಲರನ್ನು ಹೈಕೋರ್ಟ್ ಪ್ರಶ್ನಿಸಿದೆ.
ಡಿ.ಕೆ. ಶಿವಕುಮಾರ್ ವಿರುದ್ಧ ತನಿಖೆ ನಡೆಯುತ್ತಿದೆ ಎಂದು ಸಿಬಿಐ ತಿಳಿಸಿದೆ. ವಿಚಾರಣೆಯನ್ನು ಹೈಕೋರ್ಟ್ ದಸರಾ ರಜೆ ಬಳಿಕ ನಡೆಸುವುದಾಗಿ ಮುಂದೂಡಿದೆ.
2020ರಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ಅಕ್ರಮ ಆಸ್ತಿ ಗಳಿಕೆ ಪ್ರಕರಣ ದಾಖಲಿಸಿತ್ತು. ಡಿ.ಕೆ.ಶಿ ಕುಟುಂಬ 74.93 ಕೋಟಿ ಮೊತ್ತದ ಆಸ್ತಿಯನ್ನು ಅಕ್ರಮವಾಗಿ ಸಂಪಾದಿಸಿದೆ ಎಂದು ಆರೋಪಿಸಿತ್ತು.